ಶಿವಮೊಗ್ಗ, 11 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬಂಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಹೊಸದಾಗಿ ಒತ್ತುವರಿಗೆ ಅವಕಾಶ ನೀಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ/ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬಂಧ ಕೈಗೊಂಡ ಕ್ರಮದ ಕುರಿತು ವರದಿಯನ್ನು ನೀಡಬೇಕೆಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa