ವಿಜಯಪುರ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ಮೂಲಕ ಅ.23 ರಂದು ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ನಾನಾ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಅಕ್ಟೋಬರ್ 23ರ ಬೆಳಿಗ್ಗೆ 9:30 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಾನಾ ಕಲಾತಂಡಗಳೊಂದಿಗೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ 10:30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೃತ್ತಗಳಿಗೆ ದೀಪಾಲಂಕಾರ,ಆಸನ ವ್ಯವಸ್ಥೆ,,ವೇದಿಕೆ ಸಿದ್ಧತೆ ಏರ್ಪಡಿಸುವುದೂ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿಯಾತ್ರೆಗೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಅ.15ರಂದು ಬಾಗಲಕೋಟೆಯಿಂದ ಕೊಲ್ಹಾರ ಮಾರ್ಗವಾಗಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಸಂಜೆ 6-30ರಿಂದ 7-30ರವರೆಗೆ ಜ್ಯೋತಿಯಾತ್ರೆಯನ್ನು ಜಿಲ್ಲೆಯಲ್ಲಿ ಸ್ವಾಗತಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ತಮ್ಮ ಅಗತ್ಯ ಸಲಹೆ ಸೂಚನೆ ನೀಡಿದರು. ಕ್ರೀಡಾಧಿಕಾರಿ ರಾಜಶೇಖರ ದೈವಾಡಿ ಅವರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿ ಹಾಗೂ ನಾನಾ ಸಮಾಜದ ಮುಖಂಡರು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande