ಕೊಪ್ಪಳ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ವರ್ಷ ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದ್ದಾರೆ.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23ರ ಬದಲಿಗೆ ನವೆಂಬರ್ 3 ರಂದು ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಕೆಲಸ ಹಂಚಿಕೆ ಮಾಡಿದಂತೆ ಆಯಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾರ್ಯವಾಗಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಅಕ್ಟೋಬರ್ 23 ರಂದು ಕಡ್ಡಾಯವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಮಾತನಾಡಿ, ನ. 3 ರಂದು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್, ಶಾರದಾ ಟಾಕೀಸ್, ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯಭವನದವರೆಗೆ ನಡೆಯಲಿದೆ. ನಂತರ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಪ್ರೌಢಶಾಲಾ ಮಕ್ಕಳಿಗೆ ಕಿತ್ತೂರು ರಾಣಿ ಚನ್ನಮ್ಮ ಅವರ ಕುರಿತು ಪ್ರಬಂಧ ಏರ್ಪಡಿಸಿ, ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಹಿರೇಮಠ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪ ಲತಾ, ಆರೋಗ್ಯ ಇಲಾಖೆಯ ಶಿವಾನಂದ ಪೂಜಾರ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಿತ್ತೂರು ರಾಣಿ ಚೆನ್ನಮ್ಮ ಸಮಾಜದ ರಾಜ್ಯ ಅಧ್ಯಕ್ಷರಾದ ಸೋಮನಗೌಡ ಪಾಟೀಲ, ತಾಲೂಕು ಅಧ್ಯಕ್ಷರಾದ ಕರಿಯಪ್ಪ ಮೇಟಿ ಹಾಗೂ ಮುಖಂಡರಾದ ದೇವರಾಜ ಹಾಲಸಮುದ್ರ, ಮಲ್ಲಿಕಾರ್ಜುನ ಸಿಳಿನ್, ಶರಣಪ್ಪ ಶೀಲವಂತರ, ಮಾಕರ್ಂಡಪ್ಪ ಅಜಗಾರ, ಉಮೇಶ್ ಎತ್ತಿನಮನಿ, ರೇಖಾ ಸಂಗಲ್, ನಿರ್ಮಲಾ ಲಿಂಗಣ್ಣನವರ, ಶಿವಲೀಲಾ ಎಲ್. ಪಾಟೀಲ, ಸುಮಂಗಲಾ ಹಂಚಿನಾಳ, ಗೀತಾ ಪಾಟೀಲ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್