ಕೊಪ್ಪಳ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲಾ ಶಿಬಿರವನ್ನು ಹಮ್ಮಿಕೊಂಡಿದ್ದು, ಶಿಬಿರದ ಅವಧಿಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅ.30 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅ.31 ರಂದು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸಲಿದ್ದಾರೆ.
ಉಪಲೋಕಾಯುಕ್ತರು ಅ.30 ರಂದು ಬೆಳಿಗ್ಗೆ 10 ಗಂಟೆ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸುವರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರಿಂದ ಸಾರ್ವಜನಿಕರಿಗೆ ಕಾನೂನು ರೀತ್ಯ ಆಗಬೇಕಾದ ಕೆಲಸದಲ್ಲಿ ವಿಳಂಬ, ವೃಥಾ ತೊಂದರೆ ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ ಈ ಕುರಿತು ಉಪಲೋಕಾಯುಕ್ತರಿಗೆ ಲಿಖಿತ ದೂರು ಸಲ್ಲಿಸಬಹುದು.
ಅ.31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಕೊಪ್ಪಳ ಜಿಲ್ಲೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸುವರು. ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ತನಿಖೆ ಅಥವಾ ವಿಚಾರಣೆ ಬಾಕಿ ಇರುವ ಪ್ರಕರಣಗಳ (ಈ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುದಾರರು ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಲೋಕಾಯುಕ್ತ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್