ವಿಜಯಪುರ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮತ್ರಿಗಳಾಗಿದ್ದಾಗ ನಾನೇ ಮೂರು ಬಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೇನೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ ಎಂದರು.
400 ಕೋಟಿ ರೂ. ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದಾಗ ಬೇರೆಯವರು 500 ಕೋಟಿ ರೂ. ಖರ್ಚು ಮಾಡಿದರೂ, ನಮ್ಮ ಜಿಲ್ಲೆಯಲ್ಲಿ ಅದರ ಅರ್ಧಕ್ಕಿಂತ ಕಡಿಮೆ ಖರ್ಚಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಗಲಿದೆ ಎಂದು ಮನವರಿಕೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಹೇಳಿದ್ದು, ಅವರೂ ಒಪ್ಪಿದ್ದಾರೆ. ಸಚಿವ ಸಂಪುಟ ಸಭೆಯಲ್ಲೂ ಈ ವಿಷಯವನ್ನು ಚರ್ಚೆ ಮಾಡಿದಾಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದಾರೆ ಎಂದರು.
ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಸ್ವಯಂ ಪ್ರೇರಿತ ಹೋರಾಟ ನಡೆಯುತ್ತಿದೆ. ಯಾವುದೇ ಪ್ರತಿಭಟನೆ ಒಂದು ಬೇಡಿಕೆ ಇಟ್ಟುಕೊಂಡು ನಡೆಯುತ್ತದೆ. ಧರಣಿ ಕುಳಿತವರು ಅಪರಾಧಿ-ನಿರಪರಾಧಿ ಎಂದು ಸಂಬೋಧಿಸುವುದು ಸರಿಯಲ್ಲ. ಯಾರದೋ ಕುಮ್ಮಕ್ಕಿನಿಂದ ಹೋರಾಟ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹೇಳಿದ್ದಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಯಾವ ದೃಷ್ಟಿಕೋನದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ.
ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ನಿರ್ಧರಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಮ್ಮ ಸರ್ಕಾರದ ಅವಧಿಯಲ್ಲಾಗಿಲ್ಲ, ಈ ಕುರಿತು ಮರು ಪರಿಶೀಲನೆ ಪ್ರಸ್ತಾವನೆ ಸಲ್ಲಿಸಬೇಕಿದ್ದು, ಕಾನೂನು ಪ್ರಕ್ರಿಯೆ ಮುಗಿದ ಮೇಲೆ ಸರಳವಾಗಿ ಕಾಲೇಜು ಸ್ಥಾಪನೆಗೆ ಅವಕಾಶ ಸಿಗಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande