ರಾಯಚೂರು, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ತುರ್ತು ಸಂದರ್ಭದಲ್ಲಿ ಸಿದ್ಧಾರಾಗುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪ್ರಾಣ ತ್ಯಾಗವನ್ನು ನಾವೆಲ್ಲರೂ ಸ್ಮರಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಮಂಗಳವಾರ ನಗರದ ಜಿಲ್ಲಾ ಪೊಲೀಸ್ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ದೇಶದ ಏಳಿಗೆಗೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಭದ್ರ ಬುನಾದಿ ಇದ್ದಂತೆ. ಇಂತಹ ಕೆಲಸವನ್ನು ಕೈಗೊಳ್ಳುವ ವೇಳೆ ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡುವ ಪೊಲೀಸ್ ಸಿಬ್ಬಂದಿ ಬಗ್ಗೆ ಸಮಾಜ ಹೆಮ್ಮೆ ಪಡಬೇಕು ಎಂದರು.
ರಾಯಚೂರು ಜಿಲ್ಲೆಯು ಶಾಂತಿ ಸೌಹಾರ್ತಗೆ ಹೆಸರಾಗಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಬೇರೆ ಬೇರೆ ರಂಗಗಳಲ್ಲಿ ಪ್ರಗತಿಯಾಗುತ್ತಿದೆ ಎಂದರು.
ಕೆ.ಕೆ.ಆರ್.ಡಿ.ಬಿ ಅನುದಾನ ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಡಿರುವ ಸೇವೆ ಸ್ಮರಣೀಯವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, 2025ರಲ್ಲಿ ರಾಷ್ಟ್ರಮಟ್ಟದಲ್ಲಿ ಕಾನೂನುಶಾಂತಿ ಪಾಲನೆಯ ಹೋರಾಟದಲ್ಲಿ 191 ಪೊಲೀಸರು ಹಾಗೂ ಕರ್ನಾಟಕದಲ್ಲಿ 9 ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಸೇವೆ ಸ್ಮರಿಸೋಣ ಎಂದು ತಿಳಿಸಿದರು.
ಹುತಾತ್ಮರಿಗೆ ಗೌರವ: ಜಿಲ್ಲಾ ಪೊಲೀಸ್ ಮುಖ್ಯಾಲಯದ ಆವರಣದಲ್ಲಿ ನಡೆದ ಹುತಾತ್ಮರ ಸ್ಮಾರಕದ ಬಳಿಯಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ಜಿ.ಹರೀಶ್ ಅವರು ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಅತಿಥಿಗಳು ಪುಷ್ಪಗುಚ್ಛವಿರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಪೊಲೀಸ್ ಬ್ಯಾಂಡ್‌ನವರು ಶೋಕಗೀತೆ ನುಡಿಸಿದರು. ನಂತರ ಪೊಲೀಸ್ ಶಸ್ತ್ರಪಡೆಯ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸ್ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಪೊಲೀಸ್ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷರಾದ
ಕೃಷ್ಣ ಶಾವಂತಗೇರಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್