
ರಾಯಚೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ ನೋಂದಣಿಗೆ ಕ್ರಮ ವಹಿಸಬೇಕು. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪ್ರೌಢಶಾಲೆ, ವಿಶ್ವವಿದ್ಯಾಲಯ, ವೈದ್ಯಕೀಯ ಕಾಲೇಜುಗಳು, ಪದವಿಪೂರ್ವ, ಪದವಿ ಕಾಲೇಜುಗಳಲ್ಲಿ ವ್ಯಾಪಕ ಪ್ರಚಾರ ಮಾಡಿ ನೋಂದಣಿ ಸಂಖ್ಯೆಯನ್ನು ಹೆಚ್ಚಿಸುವಂತೆ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ್ ಕಾಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗದ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ದಿನಾಂಕ: 06.11.2025ರೊಳಗೆ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಆದ್ದರಿಂದ ಎಲ್ಲಾ ಅರ್ಹ ಮತದಾರರ ನೋಂದಣಿಯನ್ನು ಮಾಡಿಸಲು ಅಕ್ಟೋಬರ್ 27, 30 ಹಾಗೂ ನವಂಬರ್ 03ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅಭಿಯಾನದ ದಿನಾಂಕಗಳ0ದು ಮಹಾನಗರ ಪಾಲಿಕ ಆಯುಕ್ತರು, ತಹಶೀಲ್ದಾರರು ಹಾಗೂ ಸಹಾಯಕ ಮತದಾನ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರವ್ಯಾಪ್ತಿಗೆ ಒಳಪಡುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅವರೊಂದಿಗೆ ಕಂದಾಯ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ತಂಡಗಳನ್ನು ರಚಿಸಿ ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮುಖಾಂತರ ಸಂಪರ್ಕಿಸಿ, ನಿಗದಿಪಡಿಸಿದ ಸಮಯದೊಳಗೆ ನಿಯಮಾನುಸಾರ ನಮೂನೆ-19ರ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸ್ವೀಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಸಂಬ0ಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಲಬುರಗಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ವಿಶ್ವವಿದ್ಯಾನಿಲಯದ ಕುಲಸಚಿವರು ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಆದೇಶಿಸಲಾಗಿದ್ದು, ಈ ಎಲ್ಲಾ ಅಧಿಕಾರಿಗಳು ಕೂಡಲೇ ಅರ್ಹ ಮತದಾರರನ್ನು ಗುರುತಿಸಿ ನೋಂದಣಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ವ್ಯಾಪಕ ಪ್ರಚಾರ ನೀಡಲು ಮತ್ತು ಅರ್ಜಿ ಸ್ವೀಕೃತಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಚುನಾವಣೆಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಮೇಲ್ವಿಚಾರಣಾಧಿಕಾರಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯವರನ್ನು ನೇಮಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪ್ರತಿ ದಿನ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿ ಅದರ ವರದಿಯನ್ನು ಕಡ್ಡಾಯ ಸಲ್ಲಿಸಬೇಕೆಂದು ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್