
ಹುಬ್ಬಳ್ಳಿ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದೆ. 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇಂದು 18ನೇ ಜನತಾ ದರ್ಶನ ನಡೆಯುತ್ತಿದೆ. ಇಂದಿನ ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕಲಘಟಗಿಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜನರು ಸಾಕಷ್ಟು ಸಮಸ್ಯೆಗಳನ್ನು ಜನತಾ ದರ್ಶನದಿಂದ ಪರಿಹರಿಸಿಕೊಂಡಿದ್ದಾರೆ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರೆ, ಇತರ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳು ಕಡಿಮೆ ಸಮಯದಲ್ಲೇ ಬಗೆಹರಿಸಿವೆ. ವಿಧವಾ ವೇತನ, ವೃದ್ಧಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭೂಮಿ ಒತ್ತುವರಿ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಜನತಾ ದರ್ಶನ ಸಹಾಯಕವಾಗಿದೆ ಎಂದರು.
ಸಾರ್ವಜನಿಕ ಸಮಸ್ಯೆಗಳ ಆಲಿಕೆ
ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹೊರ ಗುತ್ತಿಗೆದಾರ ನೌಕರರಾಗಿ ಕೆಲಸ ಮಾಡುತ್ತಿರುವ ಪರಶುರಾಮ್ ಪಾಟೀಲ ಅವರು 3, 4 ತಿಂಗಳಿಂದ ಸಂಬಳ ವಿಳಂಬವಾಗಿದೆ ಎಂದು ಸಚಿವರಲ್ಲಿ ಅಳಿಲು ತೋಡಿಕೊಂಡರು. ತಕ್ಷಣ ಸಮಸ್ಯೆ ಪರಿಹರಿಸುವಂತೆ ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಮಾವಿನಕೊಪ್ಪ ಗ್ರಾಮದ ರೆಹಮಾನ ಖಾದರಸಾಬ್ ನದಾಫ್ ಅವರು ಅರಣ್ಯ ಇಲಾಖೆಯಿಂದ ಕೃಷಿ ಭೂಮಿ ಅತಿಕ್ರಮಣವಾಗಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮಿಶ್ರಿಕೋಟಿ ಗ್ರಾಮದ ಬಸವರಾಜ ಬೆಲ್ಲದ ಅವರು ಅಪಾರ ಪ್ರಮಾಣದ ಮಳೆಯಿಂದ ಬೆಳೆ ಹಾನಿ ಆಗಿದ್ದು, ಬೆಳೆ ವಿಮೆ ವಿಳಂಬವಾಗಿದೆ ಎಂದು ಸಚಿವರಿಗೆ ತಿಳಿಸಿದರು. ಬೆಳೆ ವಿಮೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷರಾದ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa