ವಿಜಯಪುರ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್.ಮೇಟಿ ಭೂಮಿ ಪೂಜೆ ನೆರವೇರಿಸುವ ಮೂಲಕ ಗುರುವಾರ ಚಾಲನೆ ನೀಡಿದರು.
ನವನಗರದ ಸೆಕ್ಟರ ನಂ.೭ರಲ್ಲಿ ಹಮ್ಮಿಕೊಂಡ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ, ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ, ನಾನಾ ಇಲಾಖೆಯ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ಹಾಗೂ ನಾನಾ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು ನವನಗರದ ಯುನಿಟ್-೧ ಮತ್ತು ೨ರಲ್ಲಿ ೧೮.೪೮ ಕೋಟಿ ರೂ.ಗಳ ಕಾಮಗಾರಿ ಸೇರಿದಂತೆ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
೭ ಜನ ವಿಕಲಚೇತನರಿಗೆ ತ್ರಿಚಕ್ರ ವಾಹನ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಆಯ್ಕೆಯಾದ ೧೧ ಫಲಾನುಭವಿಗಳಿಗೆ ಆದೇಶ ಪತ್ರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿ ಸ್ವ-ಉದ್ಯೋಗ ಮಾಡಲು ೮ ಜನ ಮಹಿಳೆಯರಿಗೆ ಹೊಲಿಗೆ ಯಂತ್ರದ ಕಿಟ್, ಎಸ್.ಬಿ.ಎಂ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ೫ ಜನರಿಗೆ ಕಾಮಗಾರಿ ಆದೇಶ ಪತ್ರ, ಕೃಷಿ ಇಲಾಖೆ ಯೋಜನೆಯಡಿ ೫ ಜನ ಫಲಾನುಭವಿಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ ೧೬ ಜನ ಫಲಾನುಭವಿಗಳಿಗೆ ಸಮುದಾಯ ಬಂಡವಾಳ ನಿಧಿ ಸೌಲಭ್ಯವನ್ನು ವಿತರಿಸಲಾಗಿದೆ.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-೪ರಡಿ ಇಬ್ಬರು ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಸೋಲಾರ ಲೈಟ್ ವಿತರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಬುಡಾದ ಅಧ್ಯಕ್ಷ ಅಬ್ದುಲ್‌ರಜಾಕ ಬೇನೂರ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಅಜಯಕುಮಾರ ಸರನಾಯಕ, ಬಸವೇಶ್ವರ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande