ಗದಗ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಸುಸಜ್ಜಿತ ವ್ಯವಸ್ಥೆ ಒಳಗೊಂಡಂತೆ ಮಾದರಿಯಾಗಬೇಕು ಹಾಗೂ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಅಂಗನವಾಡಿಗಳಿಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಮಾಹಿತಿ ಪಡೆದ ನಂತರ ನಿರ್ದೇಶನ ನೀಡಿದರು. ನಿವೇಶನವಿರುವ ಕಡೆಗೆ ಹೊಸ ಅಂಗನವಾಡಿ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರದ ಅನುದಾನ ಸದ್ಭಳಕೆಯಾಗಬೇಕು. ಯಾವುದೇ ಕಾರಣಕ್ಕೂ ನೀಡಿದ ಅನುದಾನ ಹಿಂದಿರುಗಿ ಹೋಗದಂತೆ ಇಲಾಖೆ ಮುಖ್ಯಸ್ಥರು ಕಾರ್ಯನಿರ್ವಹಿಸಬೇಕು. ಕಾಮಗಾರಿ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ. ಗುಣಮಟ್ಟದ ಕಾಮಗಾರಿಗೆ ಪ್ರಥಮಾದ್ಯತೆ ವಹಿಸಿ ಇಲಾಖಾಧಿಕಾರಿಗಳು ಕರ‍್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ದ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಂಥಾಲಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ , ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು. ಹಾಗೂ ಜಿ.ಪಂ.ದ 5 ಇಲಾಖೆಗಳ ( ಚೇಂಜ್ ಆಫ್ ವರ್ಕ ) ಕಾರ್ಯ ಬದಲಾವಣೆಯ ಕಾಮಗಾರಿಗಳಿಗೆ ಅನುಮೋದನೆ ನೀಡಿದರು.
ಈ ಸಂದರ್ಬದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಚಳಗೇರಿ, ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP