ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಭೀಕರ ಕಾಲ್ತುಳಿತ ; 9 ಭಕ್ತರ ಸಾವು
ಶ್ರೀಕಾಕುಳಂ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ನಡೆದ ಕಾಲ್ತುಳಿತದಲ್ಲಿ ಒಂಬತ್ತು ಭಕ್ತರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀ
Stamped


ಶ್ರೀಕಾಕುಳಂ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ನಡೆದ ಕಾಲ್ತುಳಿತದಲ್ಲಿ ಒಂಬತ್ತು ಭಕ್ತರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆಳಿಗ್ಗೆ ಏಕಾದಶಿ ದರ್ಶನದ ವೇಳೆ ಸಂಭವಿಸಿದ್ದು, ಸುಮಾರು 25,000 ಕ್ಕೂ ಹೆಚ್ಚು ಭಕ್ತರು ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದರು, ಈ ವೇಳೆ ಜನಸಂದಣಿಯಿಂದ ದೇವಾಲಯದ ಬೇಲಿ ಕುಸಿದು ಭಕ್ತರು ಕೆಳಗೆ ಬಿದ್ದ ಪರಿಣಾಮ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯ ಶಾಸಕ ಗೌತು ಶಿರ್ಷಾ ಅವರು ಘಟನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಜಿಲ್ಲೆಯ ಹೊರಗಿನಿಂದಲೂ ಆಂಬ್ಯುಲೆನ್ಸ್‌ಗಳನ್ನು ಕರೆಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಹತ್ತು ವರ್ಷಗಳ ಹಿಂದೆ ಹರಿ ಮುಕುಂದ ಪಾಂಡ ಕುಟುಂಬವು ಸುಮಾರು 20 ಕೋಟಿ ರೂ. ವೆಚ್ಚದಲ್ಲಿ 12 ಎಕರೆ ಭೂಮಿಯಲ್ಲಿ ನಿರ್ಮಿಸಿತ್ತು.

ಉತ್ತರ ಆಂಧ್ರದ “ಸಣ್ಣ ತಿರುಪತಿ” ಎಂದೇ ಪ್ರಸಿದ್ಧಿಯಾದ ಈ ದೇವಾಲಯಕ್ಕೆ ಇತ್ತೀಚಿನ ವರ್ಷಗಳಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.

ಆದರೆ, ಏಕಾದಶಿಯಂದು ಭಕ್ತರ ಸುರಕ್ಷತೆ ಮತ್ತು ಮೂಲಸೌಕರ್ಯಗಳ ಕೊರತೆ ಕುರಿತು ಸ್ಥಳೀಯರು ದೇವಾಲಯ ಆಡಳಿತದ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ.

ದೇವಾಲಯದ ಸಿಬ್ಬಂದಿಯ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯ ನಂತರ ದೇವಾಲಯದ ಸುತ್ತಮುತ್ತ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಜಿಲ್ಲಾಡಳಿತವು ಘಟನೆಯ ಕುರಿತು ಸಮಗ್ರ ತನಿಖೆಗೆ ಆದೇಶಿಸಿದೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, “ಈ ದುರಂತದಿಂದ ನಾನು ಆಘಾತಗೊಂಡಿದ್ದೇನೆ. ಮೃತರ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಸ್ಥಳೀಯ ಆಡಳಿತ ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯವನ್ನು ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande