ಪರಪ್ಪನ ಅಗ್ರಹಾರ ಮುಖ್ಯ ಅಧೀಕ್ಷಕ ಎತ್ತಂಗಡಿ, ಇಬ್ಬರು ಅಧಿಕಾರಿಗಳ ಅಮಾನತು
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ಆರೋಪ ಗಂಭೀರ ತಿರುವು ಪಡೆದಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ. ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀ
Home minister


ಬೆಂಗಳೂರು, 10 ನವೆಂಬರ್ (ಹಿ.ಸ.) :

ಆ್ಯಂಕರ್ : ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ಆರೋಪ ಗಂಭೀರ ತಿರುವು ಪಡೆದಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ. ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅಧೀಕ್ಷಕ ಮ್ಯಾಗೇರಿ ಮತ್ತು ಉಪಾಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆದೇಶಿಸಿದ್ದಾರೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ಗೃಹ ಸಚಿವರು, “ಈ ಘಟನೆ ಕುರಿತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ ಹಾಗೂ ರಿಷ್ಯಂತ್ ಸದಸ್ಯರಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಗೆ ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ,” ಎಂದು ಹೇಳಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಮಾರು 5,000 ಕೈದಿಗಳು ಇದ್ದು, ಅಪರಾಧಿಗಳು ಹಾಗೂ ವಿಚಾರಣಾಧೀನ ಕೈದಿಗಳು ಒಟ್ಟಿಗೆ ವಾಸಿಸುತ್ತಿದ್ದಾರೆ. ಜೈಲುಗಳ ಮೇಲಿನ ನಿಗಾವಹಣೆ ಬಲಪಡಿಸಲು 15 ದಿನಗಳೊಳಗೆ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲು ಸರ್ಕಾರ ಉದ್ದೇಶಿಸಿದೆ. ಇನ್ನುಮುಂದೆ ಜೈಲಿನ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿಯನ್ನೇ ನೇಮಕ ಮಾಡುವ ನಿರ್ಧಾರವಿದೆ ಎಂದು ಸಚಿವರು ಹೇಳಿದರು.

ಒಂದೇ ಜೈಲಿನಲ್ಲಿ ದೀರ್ಘಕಾಲ ಸೇವೆ ಮಾಡಿದ ಅಧಿಕಾರಿಗಳು ಸ್ಥಳೀಯ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ 5 ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯಗೊಳಿಸಲಾಗುವುದು. ಜೊತೆಗೆ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ ಎಂದರು.

ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಹಾಯಕ ಅಧೀಕ್ಷಕರು ಸೇರಿದಂತೆ ಸುಮಾರು 1,000 ಸಿಬ್ಬಂದಿಯನ್ನು ನೇಮಿಸಲು ಉದ್ದೇಶಿಸಲಾಗಿದೆ. “ಸಿಬ್ಬಂದಿ ಕೊರತೆ ನಿವಾರಣೆಗೊಂಡರೆ ಜೈಲು ನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಡೆಯಲಿದೆ,” ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವು ಕಾನೂನುಬಾಹಿರ ಚಟುವಟಿಕೆಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, “ಆ ವಿಡಿಯೋಗಳಲ್ಲಿ ಬಹುತೇಕವು 2023ರವು. ಇತ್ತೀಚಿನ ಎರಡು–ಮೂರು ವಿಡಿಯೋಗಳು ಕಳೆದ 3–4 ತಿಂಗಳ ಹಿಂದಿನವು. ಈ ವಿಷಯವಾಗಿ ಅಧಿಕಾರಿಗಳಿಗೆ ಪೂರ್ಣ ವರದಿ ನೀಡಲು ಸೂಚಿಸಲಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande