
ಮಂಡ್ಯ, 11 ನವೆಂಬರ್ (ಹಿ.ಸ.) :
ಆ್ಯಂಕರ್ : ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ʼಮಂಡ್ಯ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
16 ರಿಂದ 18 ತಾಸು ರಸ್ತೆಯಲ್ಲಿ ಸಂಚರಿಸಿ ಜೀವ ಪಣಕ್ಕಿಟ್ಟು ಸ್ವಿಗ್ಗಿ, ಜ್ಯೊಮೋಟೊ ಪ್ಲಾಟ್ ಫಾರಂಗಳಲ್ಲಿ ಕೆಲಸ ಮಾಡುತ್ತಿರುವ ಯುವಕರಿಗೆ ಹಾಗೂ ಕಾರ್ಮಿಕರಿಗೆ ಅಪಘಾತ ವಿಮೆ ನೀಡಲು ನೂತನ ಯೋಜನೆ ಜಾರಿಗೆ ತರಲಾಗಿದೆ. ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಪರಿಹಾರ, ಅಂಗವೈಫಲ್ಯತೆಯಾದರೆ ರೂ. 2 ಲಕ್ಷ ಪರಿಹಾರ ಹಾಗೂ ಗರಿಷ್ಠ 1 ಲಕ್ಷದಷ್ಟು ಆಸ್ಪತ್ರೆಗೆ ತಗಲುವ ವೆಚ್ಚವನ್ನು ಭರಿಸಲಾಗುವುದು ಎಂದರು.
ಕುಟುಂಬದ ಜವಾಬ್ದಾರಿ ನಿರ್ವಹಿಸುವ ಯುವಕರ ಜೀವ ಅಮೂಲ್ಯವಾದದ್ದು ಪ್ರತಿಯೊಬ್ಬರೂ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಲು ಮರೆಯದಿರಿ. ಹಾಗೆಯೇ ಪ್ರತಿ ತಿಂಗಳು ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆಯಿಂದಾಗುವ ಸದುಪಯೋಗ ಕುರಿತು ಜಾಗೃತಿ ಕಾರ್ಯಕ್ರಗಳನ್ನು ಆಯೋಜಿಸಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಪ್ರಮುಖವಾಗಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಯುವಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಆಶಾದೀಪ ಯೋಜನೆಯನ್ನು ಜಾರಿಗೆ ತಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಕಂಪನಿಗಳಿಗೆ, ಮಾಲೀಕರಿಗೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲು ಶೇಕಡಾ 50 ಧನಸಹಾಯವನ್ನು ಆಶಾದೀಪ ಯೋಜನೆಯಡಿ ಕಾರ್ಮಿಕ ಇಲಾಖೆಯಿಂದ ನೀಡಲಾಗುವುದು ಎಂದು ತಿಳಿಸಿದರು.
101 ಅಸಂಘಟಿತ ಕಸುಬು ಮಾಡುವ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಲಕ್ಷಾಂತರ ಜನರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಗುತ್ತಿದ್ದೆ ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಲಾಗುವುದು ಎಂದು ಹೇಳಿದರು.
ಒಂದು ಸಿನಿಮಾ ಯಶಸ್ವಿಯಾಗಲು ಸಿನಿಮಾರಂಗದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಶ್ರಮವು ಪ್ರಮುಖವಾಗಿರುತ್ತದೆ. ಸಿನಿಮಾ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲವಾಗಲು ನೂತನ ಸೌಲಭ್ಯ ಯೋಜನೆ ತರಲು ಕಾರ್ಮಿಕ ಇಲಾಖೆ ಮುಂದಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa