
ಹುಬ್ಬಳ್ಳಿ, 12 ನವೆಂಬರ್ (ಹಿ.ಸ.):
ಆ್ಯಂಕರ್:
ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ 6 ಪಥದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್ ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ ಶೇ. 73.89 ರಷ್ಟು ಪ್ರಗತಿಯಾಗಿದ್ದು, ಉಳಿದ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ 2026 ರವರೆಗೆ ಕಾಲಾವಕಾಶ ಕೇಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಗುತ್ತಿಗೆದಾರರು ಮನವಿ ಸಲ್ಲಿಸಿದ್ದು, ಪ್ರಸ್ತುತ ಕಾಮಗಾರಿ ತೀವ್ರಗತಿಯಲ್ಲಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಹುಬ್ಬಳ್ಳಿ ಮತ್ತು ಧಾರವಾಡ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಹುಬ್ಬಳ್ಳಿ ಮತ್ತು ಧಾರವಾಡ ನಡುವಿನ 30.60 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದೆ.
2023 ರ ಆರಂಭಗೊಂಡಿದ್ದ ಕಾಮಗಾರಿಯು ಸೆಪ್ಟೆಂಬರ್ 2025 ರೊಳಗೆ ಪೂರ್ಣಗೊಳ್ಳಬೇಕಿತ್ತು. ಈ ಮಹತ್ವದ ಯೋಜನೆಯು ಶೇ. 75 ರಷ್ಟು ಪೂರ್ಣಗೊಂಡಿದೆ. ಉಳಿದ ಶೇ. 15 ರಷ್ಟು ಕಾಮಗಾರಿಯನ್ನು ಆದಷ್ಟು ಬೇಗ ನಿಗದಿತ ಸಮಯದೊಳಗೆ ಮುಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಕಾಮಗಾರಿಯು ರೂ.580 ಕೋಟಿ ಮೊತ್ತದ್ದಾಗಿದ್ದು, ಇದರಲ್ಲಿ ರಸ್ತೆಗಳ ಅಗಲೀಕರಣ, ಸೇತುವೆಗಳ ನಿರ್ಮಾಣ ಮತ್ತು ಮಳೆನೀರು ನಿರ್ವಹಣೆಯನ್ನು ಒಳಗೊಂಡಿದೆ. ಈ ಯೋಜನೆಯಡಿ, ಈಗಾಗಲೇ 62 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರು, ರೈತರು ಮತ್ತು ಸ್ಥಳೀಯರ ಬೇಡಿಕೆಗಳನ್ನು ಪರಿಗಣಿಸಿ, ಕೆಲವು ಕಡೆಗಳಲ್ಲಿ ಸರ್ವಿಸ್ ರಸ್ತೆಗಳನ್ನು ಅಗಲೀಕರಣಗೊಳಿಸಲಾಗುವುದು ಎಂದು ತಿಳಿಸಿದರು.
ಹೆಚ್ಚುವರಿಯಾಗಿ, ಮಳೆನೀರು ಹೆಚ್ಚಾಗಿ ಹರಿಯುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಈ ಹೆಚ್ಚುವರಿ ಕಾಮಗಾರಿಗಳಿಗಾಗಿ ಸುಮಾರು 23 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಸದ್ಯ ಈ ಭೂಸ್ವಾಧೀನ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾರ್ಚ್ 2026 ರ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮಾಸಿಕ ಪ್ರಗತಿ ವರದಿಗಳನ್ನು ಸಲ್ಲಿಸಲಾಗುತ್ತಿದ್ದು, ಕಾಮಗಾರಿಯ ವೇಗವನ್ನು ನಿರ್ಧರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹಾನಿಗೊಳಗಾದ ಭಾಗಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.
ತಾಂತ್ರಿಕ ಅಥವಾ ನಿರ್ಮಾಣಕ್ಕೆ ಸಂಬಂಧಿತ ಸಮಸ್ಯೆಗಳು ಎದುರಾದಲ್ಲಿ, ಅವುಗಳನ್ನು ತಕ್ಷಣವೇ ಸರಿಪಡಿಸಲು ನಾವು ಸೂಚನೆ ನೀಡಿದ್ದೇವೆ. ರಸ್ತೆ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ದೇವರಾಜ ಆರ್., ಯೋಜನಾ ನಿರ್ದೇಶಕ ಭುವನೇಶಕುಮಾರ, ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಗುತ್ತಿಗೆದಾರ ಕಂಪನಿಯ ಯೋಜನಾ ನಿರ್ದೇಶಕ ಮನೋಜ ತಿವಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa