
ಕೊಪ್ಪಳ, 19 ನವೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯನ್ನು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.
ಅವರು ಕೊಪ್ಪಳ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ “ಕೂಲಿಗಲ್ಲ, ಶಾಲೆಗೆ ಅಭಿಯಾನ”ದ ಕುರಿತು ವಿವಿಧ ಭಾಗೀದಾರರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತ ಸಂವಿಧಾನದ ಪರಿಚ್ಛೇದ 21(ಎ) ರನ್ವಯ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕು ಎಂದು ತಿಳಿಸಿದೆ. ಪರಿಚ್ಛೇಧ 24 ರನ್ವಯ 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವುದನ್ನು ಕಡ್ಡಾಯವಾಗಿ ನಿಷೇಧಿಸುತ್ತದೆ. “ಮಕ್ಕಳ ದುಡಿಮೆ, ದೇಶಕ್ಕೆ ಕಳಂಕ” ಎಂದು ಮಕ್ಕಳ ದುಡಿಮೆಯನ್ನು ನಿಷೇಧಿಸಿ ಸರಕಾರವು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ) ಹದಿಹರೆಯದ ಮಕ್ಕಳ ದುಡಿಮೆ ನಿಯಂತ್ರಣ ಕಾಯ್ದೆ-1986 ತಿದ್ದುಪಡಿ-2016ನ್ನು ಜಾರಿಗೆ ತಂದಿರುತ್ತದೆ ಎಂದರು.
ಈ ಕಾಯ್ದೆಯ ಕಲಂ 17ರನ್ವಯ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರುಗಳನ್ನಾಗಿ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಿ ನೇಮಿಸಿ ಆದೇಶಿಸಿದೆ. ಈ ಕಾರ್ಮಿಕ ನಿರೀಕ್ಷಕರು ಸಕ್ರೀಯವಾಗಿ, ಸಮನ್ವಯತೆಯಿಂದ ಕಾರ್ಯನಿರ್ವಹಿಸದೆ ಇರುವುದರಿಂದಾಗಿ ಜಿಲ್ಲೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿದು ಕೂಲಿ ಕೆಲಸ, ಇಟ್ಟಂಗಿ ಬಟ್ಟಿಗಳಲ್ಲಿ, ಗ್ಯಾರೇಜ್‌ಗಳಲ್ಲಿ, ಹೊಟೇಲ್‌ಗಳಲ್ಲಿ, ಕೋಳಿ ಫಾರ್ಮಗಳಲ್ಲಿ, ಬೀಜೋತ್ಪಾದನೆ, ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.
ಈ ಅವಧಿಯಲ್ಲಿ ಅವರಿಗೆ ವೇತನ ತಾರತಮ್ಯ, ವಯಸ್ಸಿಗೆ ಮೀರಿದ ಹೆಚ್ಚಿನ ಹೊರೆಯ ಕೆಲಸ ನೀಡುವುದು ಮತ್ತು ಅಗತ್ಯ ರಕ್ಷಣಾ ಪರಿಕರಗಳನ್ನು ಒದಗಿಸದೇ ಅವರುಗಳನ್ನು ಶೋಷಿಸುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಧಿಕಾರಿಗಳ ನಿಷ್ಕ್ರೀಯತೆ, ಗಮನ ನೀಡದೇ ಇರುವುದರಿಂದಾಗಿ ಸಂವಿಧಾನವು ನೀಡಿರುವ ಹಕ್ಕುಗಳಿಂದ ಜಿಲ್ಲೆಯ ಮಕ್ಕಳು ವಂಚಿತರಾಗುತ್ತಿದ್ದಾರೆ. ಶಿಕ್ಷಣ ಹಕ್ಕನ್ನು ಪ್ರತಿ ಮಗುವಿಗೂ ಖಾತ್ರಿಪಡಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೊಪ್ಪಳ ಜಿಲ್ಲಾಡಳಿತದೊಂದಿಗೆ ವಿನೂತನವಾಗಿ “ಕೂಲಿಗಲ್ಲ, ಶಾಲೆಗೆ ಅಭಿಯಾನ” ಎಂಬ ಶಿರ್ಷೆಕೆಯಡಿ ಕಾರ್ಯಕ್ರಮವನ್ನು ಆರಂಭಿಸುತ್ತಿದೆ ಎಂದರು.
ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ) ಹದಿಹರೆಯದ ಮಕ್ಕಳ ದುಡಿಮೆ ನಿಯಂತ್ರಣ ಕಾಯ್ದೆ-1986 ತಿದ್ದುಪಡಿ-2016ರನ್ವಯ ಕಲಂ 17ರಡಿಯಲ್ಲಿ ಕಾರ್ಮಿಕ ಇಲಾಖೆಯ ಎಲ್ಲಾ ಕಾರ್ಮಿಕ ನಿರೀಕ್ಷಕರು, ಕಂದಾಯ ಇಲಾಖೆಯ ತಹಶೀಲ್ದಾರರು, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ನಗರಾಭಿವೃದ್ಧಿ ಇಲಾಖೆಯ ನಗರ ಸಭೆ ಆಯುಕ್ತರು, ಮುಖ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬ್ಲಾಕರಿರ್ಸೊಸ್‌ಕೋ-ಆಡಿನೇಟರ್, ಸರ್ವ ಶಿಕ್ಷಾ ಅಭಿಯಾನದ ಅಧಿಕಾರಿಗಳು, ಕಾರ್ಖಾನೆ ಮತ್ತು ಬಾಯ್ಲರ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು, ರೇಷ್ಮೇ ಇಲಾಖೆಯ ವಿಸ್ತರಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಕೈಗಾರಿಕ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರು, ಕೈಗಾರಿಕ ವಿಸ್ತರಣಾಧಿಕಾರಿಗಳನ್ನು “ನಿರೀಕ್ಷಕರು”ಗಳನ್ನಾಗಿ ನೇಮಿಸಿ ಆದೇಶಿಸಿದ್ದು, ನಿರೀಕ್ಷಕರುಗಳಾಗಿ ತಮ್ಮ ಇಲಾಖೆಗಳಲ್ಲಿರುವ ಅಧಿಕಾರಿಗಳಿಗೆ ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ನಿರ್ದೇಶನವನ್ನು ನೀಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ವಹಿಸಿ ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವ್ಹಾಯ್ ಶೆಟೆಪ್ಪನವರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾಗರಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿದಂತೆ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್