



ಕೊಪ್ಪಳ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಡಿಸೆಂಬರ್ 2 ಮತ್ತು 3 ರಂದು ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಗಳಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.
ಅವರು ಗುರುವಾರ ಅಂಜನಾದ್ರಿಗೆ ಭೇಟಿ ನೀಡಿ ಡಿಸೆಂಬರ್ 2 ಮತ್ತು 3 ರಂದು ನಡೆಯಲಿರುವ ಹನುಮಮಾಲ ಕಾರ್ಯಕ್ರಮದ ಪೂರ್ವಸಿದ್ದತೆಗಳ ಸ್ಥಳ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದರು.
ಹನುಮಮಾಲ ಕಾರ್ಯಕ್ರಮಕ್ಕೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆಯಾಗಿ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ವಾಹನಗಳ ಪಾಕಿರ್ಂಗ್, ಬ್ಯಾರಿಕೇಡ್ ವ್ಯವಸ್ಥೆ, ಲೈಟಿಂಗ್, ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಕುಡಿಯುವ ನೀರು, ಹಾಗೂ ಸಿಸಿಟಿವಿ ಅಳವಡಿಕೆ ಸೇರಿದಂತೆ ಇತರೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದೆ ಎಂದರು.
ಹೋಮ, ಹವನ, ಅಲಂಕಾರ, ವಿಡಿಯೋ ಲೈವ್ ಸ್ಟ್ರೀಮಿಂಗ್, ಸ್ನಾನಘಟ್ಟ, ಶೌಚಾಲಯ ಮತ್ತು ಈ ಕೂಡಲೆ ಸ್ವಚ್ಚತೆ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಸಂಸದರು. ಶಾಸಕರು ಒಳಗೊಂಡಂತೆ ಎಲ್ಲರ ಸಭೆ ಮಾಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅವರ ನಿರ್ದೇಶನದಂತೆ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು. ಈ ವರ್ಷ ಒಂದುವರೆ ಲಕ್ಷದಿಂದ ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು ಈ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಈ ತಿಂಗಳ 30 ನೇ ತಾರೀಖಿನ ಒಳಗಡೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಈಗಾಗಲೇ ಎಲ್ಲಾ ಕಡೆಯ ಪಾಕಿರ್ಂಗ್ ಸ್ಥಳಗಳಿಗೆ ಭೇಟಿ ನೀಡಲಾಗಿದೆ. ಸುಮಾರು 25 ಕಡೆ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು. ಪಾಕಿರ್ಂಗ್ ಸ್ಥಳ ಮತ್ತು ಊಟದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 15 ನೂರು ಜನ ಪೊಲೀಸರಿಗೆ ಈ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗುವುದು. ನಮ್ಮ ಪೊಲೀಸ್ ಇಲಾಖೆ ವತಿಯಿಂದ ಯಾವುದೇ ಸಮಸ್ಯೆಗಳಾಗದಂತೆ ಎಲ್ಲಾ ಕಡೆ ಸೆಕ್ಯೂರಿಟಿ ವ್ಯವಸ್ಥೆ ಮಾಡುವ ಮೂಲಕ ಹನುಮಮಾಲ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಪಂಚಾಯತ ವತಿಯಿಂದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೆಶನ ನೀಡಲಾಗಿದೆ. ಬರುವ ಜನರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಪಾಕಿರ್ಂಗ್ ಸ್ಥಳಗಳು. ಬ್ಯಾರಿಕೇಡ್ ವ್ಯವಸ್ಥೆ, ಕಂಟ್ರೋಲ್ ರೂಮ್, ಮೆಡಿಕಲ್ ಟೀಂ ನ ಸ್ಥಳ, ವೇದಪಾಠ ಶಾಲೆಯಲ್ಲಿ ಪ್ರಸಾದ ವಿತರಣೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಅಂಜನಾದ್ರಿ ಬೆಟ್ಟದ ತುದಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಆರ್. ಹೇಮಂತಕುಮಾರ್, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಕರ್ಣಕುಮಾರ ಹಾಗೂ ಕೊಪ್ಪಳ, ಗಂಗಾವತಿ ಹಾಗೂ ಕನಕಗಿರಿ ತಹಶಿಲ್ದಾರರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್