
ಬೆಂಗಳೂರು, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದ ಹೃದಯಭಾಗವಾದ ಚಿಕ್ಕಪೇಟೆಯ ಬಿ.ವಿ.ಕೆ. ಅಯ್ಯಂಗಾರ್ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ರಸ್ತೆಯ ಕುಂದುಕೊರತೆ, ಮಳೆಗಾಲದ ಹಾನಿ ಹಾಗೂ ದೈನಂದಿನ ಸಂಚಾರಕ್ಕೆ ಉಂಟಾಗಿರುವ ತೊಂದರೆಗಳನ್ನು ಸ್ಥಳೀಯ ವ್ಯಾಪಾರಿಗಳು ಮತ್ತು ನಾಗರಿಕರು ಅಶೋಕ ಅವರಿಗೆ ವಿವರಿಸಿದರು. ಈ ವೇಳೆ ಮಾತನಾಡಿದ ಅಶೋಕ, “ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯಗಳ ಬಗ್ಗೆ ಸಂಪೂರ್ಣ ನಿರಾಸಕ್ತಿ ತೋರಿಸಿದೆ. ವ್ಯಾಪಾರಿಗಳ ಜೀವನೋಪಾಯಕ್ಕೂ ರಸ್ತೆ ದುರಸ್ತಿ ವಿಳಂಬ ತೀವ್ರ ಹಾನಿ ಮಾಡಿದೆ” ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಲೋಕ ಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಹಲವು ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa