
ಬೆಂಗಳೂರು, 23 ನವೆಂಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ಪ್ರತಿ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.
ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.
ಬಳಿಕ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ಸಚಿವರು ಪರಿಶೀಲನೆ ನಡೆಸಿದರು.
ಸುಮಾರು 50 ಸಾವಿರಕ್ಕೂ ಅಧಿಕ ಮಹಿಳೆಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಯಾವುದೇ ಲೋಪದೋಷಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ರೀತಿಯಲ್ಲಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ ಎಚ್.ನಿಶ್ವಲ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa