

ಬಳ್ಳಾರಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : `ಕೆಪಿಎಸ್ ಮ್ಯಾಗ್ನೆಟ್' ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲೆಯ 421 ಸರ್ಕಾರಿ ಶಾಲೆಗಳು ಸೇರಿ ರಾಜ್ಯದ 40,000ಕ್ಕೂ ಅಧಿಕ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ವ್ಯವಸ್ಥೆಯ ವಿರೋಧಿ ಕ್ರಮವಾಗಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‍ನ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಕೆ. ಈರಣ್ಣ ಅವರು ತಿಳಿಸಿದ್ದಾರೆ.
ಸುದ್ದಿಗಾರರಿಗೆ ಸೋಮವಾರ ಈ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500 ಶಾಲೆಗಳನ್ನು ಮುಚ್ಚಲು ಸರ್ಕಾರ ಪ್ರಸ್ತಾವನೆ ಸಿದ್ದಪಡಿಸಿದೆ ಎಂದರು.
ಕರ್ನಾಟಕ ಸರ್ಕಾರ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು. ಪ್ರಾಥಮಿಕ ಶಿಕ್ಷಣವನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸುಲಭವಾಗಿ - ಉಚಿತವಾಗಿ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಖಜಾಂಚಿ ಅನುಪಮಾ ಮತ್ತು ಸದಸ್ಯರಾದ ತಿಪ್ಪೇಸ್ವಾಮಿ, ಎ.ಕೆ. ಮಂಜುನಾಥ, ಸೋಮಶೇಖರ್ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್