
ಬೆಂಗಳೂರು, 25 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಸಂಬಂಧ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಹಾಗೂ ಸಿಂಧನೂರಿನಲ್ಲಿ ನಾಬಾರ್ಡ್ ಮತ್ತು ಕೆ.ಕೆ.ಆರ್.ಡಿ.ಬಿ ಸಹಯೋಗದೊಂದಿಗೆ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ಸಚಿವ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂಪರ್ವೇಜ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಮುಖ್ಯಮಂತ್ರಿ ಅವರು ಘೋಷಿತ 7 ಹೊಸ ಜಿಟಿಟಿಸಿ ಕೇಂದ್ರಗಳ ಕಾಮಗಾರಿ ಶೀಘ್ರ ಪ್ರಾರಂಭಿಸಲು ಸೂಚನೆ ನೀಡಿದರು. ಗುರುತಿಸಲಾದ ಸ್ಥಳಗಳಲ್ಲಿ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಕೂಡ ಸೂಚಿಸಲಾಯಿತು.
ರಾಜ್ಯದಲ್ಲಿ ಜಿಟಿಟಿಸಿ ಪ್ರವೇಶಾತಿ 6 ಸಾವಿರಕ್ಕೆ ಹೆಚ್ಚಿಸಲಾಗಿದ್ದು, ಇಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ದೇಶ-ವಿದೇಶಗಳ ಕೈಗಾರಿಕೆಗಳಲ್ಲಿ ಶೇಕಡಾ 100 ರಷ್ಟು ನೇಮಕಾತಿ ನೆರವೇರಿರುವುದನ್ನು ಸಭೆಯಲ್ಲಿ ಹೇಳಲಾಯಿತು. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲು ಮತ್ತು ಕಾರ್ಮಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.
ಜಿಟಿಟಿಸಿ ಉತ್ಪಾದನಾ ಘಟಕದಲ್ಲಿ ಇಸ್ರೋ ಚಂದ್ರಯಾನ ಲೂನರ್ ರೋವರ್ ಚಕ್ರ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಯಶಸ್ವಿಯಾಗಿ ನಡೆಯುತ್ತಿದೆ ಎನ್ನುವುದನ್ನೂ ಅಧಿಕಾರಿಗಳು ಮಾಹಿತಿ ನೀಡಿದರು. ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳೊಂದಿಗೆ ಜಿಟಿಟಿಸಿ ಸಹಕಾರ ಒಪ್ಪಂದಗಳಿಗೆ ಸಿದ್ಧತೆ ನಡೆಯುತ್ತಿರುವುದಾಗಿ ಸಭೆಯಲ್ಲಿ ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa