

ಕೊಪ್ಪಳ, 26 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯುನಿಟ್ ಸಂಖ್ಯೆಗಳನ್ನು ಹೆಚ್ಚಿಸಿ, ಅದರಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆಯ 2024-25ನೇ ಸಾಲಿನ ಜಿಲ್ಲಾ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪಾಲನೆಯನ್ನು ಕಲಿಸುವ ಒಂದು ಮಹತ್ವದ ಸಂಸ್ಥೆಯಾಗಿದೆ. ಹಾಗಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಇರುವುದು ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸಂಸ್ಥೆಯವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ, ಸಮವಸ್ತ್ರವನ್ನು ಒದಗಿಸಿ, ಶಿಸ್ತು ಕಲಿಸಲು ಕ್ರಮ ವಹಿಸಬೇಕು. ಇದರ ಜೊತೆಗೆ ಪದವಿ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಬೇಕು ಎಂದರು.
ಘಟಕಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರಮುಖ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು ಸ್ವಯಂ ಪ್ರೇರಿತವಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರವನ್ನು ಕೊಪ್ಪಳ ಜಿಲ್ಲೆಯ ಸಂಜೀವಿನಿ ಮತ್ತು ಎನ್.ಆರ್.ಎಲ್.ಎಂ ಮಹಿಳಾ ಸ್ವ-ಸಹಾಯ ಸಂಘಗಳಿಂದ ಪೂರೈಸಿಕೊಳ್ಳಬೇಕು. ಗ್ರಾಮ ಪಂಚಾಯತ್‌ಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳಿಗೆ ಇರುವ ವಂತಿಕೆಯನ್ನು ನೀಡಲು ಜಿಲ್ಲಾ ಪಂಚಾಯತ್‌ಗೆ ಮನವಿ ಸಲ್ಲಿಸಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಶೌಚಾಲಯ ಮತ್ತು ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಯೋಜನಾ ವರದಿಯನ್ನು ಆದಷ್ಟು ಬೇಗನೆ ಕೊಡಬೇಕು ಎಂದು ಹೇಳಿದರು.
ಜಿಲ್ಲಾ ತರಬೇತಿ ಸ್ಕೌಟ್ಸ್ ಆಯುಕ್ತರಾದ ಶ್ರೀಕಾಂತ ಮಾಸಗಟ್ಟಿ ಅವರು ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು 75ನೇ ವರ್ಷಾಚರಣೆಯಲ್ಲಿದ್ದು, ಚೀಟಿ ಬಿಡುಗಡೆ ಮಾಡುವ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ಜಿಲ್ಲಾ ಮತ್ತು ರಾಜ್ಯ ಹಂತಗಳಲ್ಲಿ ಪರೀಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ರಾಜ್ಯ ಮಟ್ಟಡ ಜಾಂಬೋರೇಟ್ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಲಿದ್ದು, ಅಲ್ಲಿಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಅನುಮತಿ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ರ‍್ಯಾಲಿ ಮಾಡಲಾಗುತ್ತಿದ್ದು, ಇದಕ್ಕೂ ಸಹ ತಾವು ಅನುಮತಿ ನೀಡಬೇಕು ಎಂದರು.
ಸಂಸ್ಥೆಯ ಚಟುವಟಿಕೆಗಳ ವರದಿ, ಲೆಕ್ಕಪತ್ರಗಳ ವರದಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ಅಭಿವೃದ್ಧಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಸಂಸ್ಥೆಯ ಉಪಾಧ್ಯಕ್ಷರಾದ ಅರುಣಾ ವಸ್ತ್ರದ, ಸಂಸ್ಥೆಯ ಜಿಲ್ಲಾ ಆಯುಕ್ತರಾದ ಮಲ್ಲಿಕಾರ್ಜುನ ಚೌಕಿಮಠ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಸುರೇಶ್ ಜಿ., ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಮಾರುತಿ ಆರೇರ್, ಜಿಲ್ಲಾ ಜಂಟಿ ಕಾರ್ಯದರ್ಶಿ ದ್ರಾಕ್ಷಾಯಿಣಿ, ಜಿಲ್ಲಾ ಸಹಕಾರ್ಯದರ್ಶಿ ಪ್ರಭಾಕರ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವೀರಪ್ಪ ಗಾಣಿಗೇರ್, ಅಲಿ ಹುಸೇನ್ ಹಾಗೂ ಮಲ್ಲಪ್ಪ, ಸ್ಕೌಟ್ಸ್ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಶರೀಫಸಾಬ ಹತ್ತಿಮತ್ತೂರ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಇತರೆ ಪದಾಧಿಕಾರಿಗಳು ಮತ್ತು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್