
ವಿಜಯಪುರ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ಅತ್ಯಂತ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ, ನಿಮ್ಮ ಹಂತದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ಒಂಟಿಗೋಡಿ ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದರು.
ಬಸವನ ಬಾಗೇವಾಡಿಯ ಪುರಸಭೆಯ ಸಭಾ ಭವನದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘನೆ, ತಡೆಗಟ್ಟುವುದು ಮತ್ತು ಪರಿಹಾರ ಒದಗಿಸುವುದೇ ಉದ್ದೇಶವಾಗಿದೆ. ಅಧಿಕಾರಿಗಳು ತಮ್ಮ ಹಂತದಲ್ಲಿ ಬರುವ ಸಾರ್ವಜನಿಕ ಸಮಸ್ಯೆಗಳನ್ನು ಅತ್ಯಂತ ಮುತುವರ್ಜಿ ವಹಿಸಿ ಮಾನವೀಯ ನೆಲೆಗಟ್ಟಿನಲ್ಲಿ ಅವರ ಸಮಸ್ಯೆಗಳಿಗೆ ತಮ್ಮ ಹಂತದಲ್ಲಿಯೇ ಪರಿಹಾರ ಒದಗಿಸಿಕೊಡುವಂತೆ ಅವರು ಹೇಳಿದರು.
ಮಾನವ ಹಕ್ಕುಗಳ ಘನತೆ ಮತ್ತು ಗೌರವ ಎತ್ತಿಹಿಡಿಯಬೇಕು. ಸಮಸ್ಯೆಗಳಿಗೆ ಸ್ಪಂದಿಸಿ, ಕಾರ್ಯನಿರ್ವಹಿಸಿ,ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ನೈಜ ಫಲಾನುಭವಿಗಳಿಗೆ ದೊರಕುವಂತೆ ನೋಡಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಅತ್ಯಂತ ಮುಂಜಾಗ್ರತವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆ-ವಸತಿ ನಿಲಯಗಳಲ್ಲಿ ಅಗತ್ಯ ಶೌಚಾಲಯ ವ್ಯವಸ್ಥೆ ಕಲ್ಪಿಸಿರುವುದು ಒಳಗೊಂಡಂತೆ ಅಗತ್ಯ ಮೂಲಭೂತ ಸೌಕರ್ಯಕ್ಕಾಗಿ ಕ್ರಮವಹಿಸಿ ಎಂದು ಅವರು ಹೇಳಿದರು.
ಈ ಸಭೆಯಲ್ಲಿ ತಹಶೀಲ್ದಾರರಾದ ವೈ.ಎಸ್.ಸೋಮನ ಕಟ್ಟಿ, ತಾಲೂಕಾ ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ದೇಸಾಯಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande