

ಬೆಂಗಳೂರು, 29 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಹಸ್ತಾಂತರ ಕುರಿತು ಇತ್ತೀಚೆಗೆ ನಡೆದಿರುವ ರಾಜಕೀಯ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತೆರೆ ಎಳೆದಿದ್ದಾರೆ.
ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಉಪಹಾರ ಕೂಟದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಒಂದೇ ಧ್ವನಿಯಲ್ಲಿ ಮಾತನಾಡಿ, ಕಾಂಗ್ರೆಸ್ ಒಳಗಿರುವ ಭಿನ್ನಾಭಿಪ್ರಾಯದ ವದಂತಿಗಳಿಗೆ ತೆರೆ ಎಳೆದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ,
“ಅನಗತ್ಯ ಗೊಂದಲಗಳನ್ನು ಯಾರೋ ಹೊರಗಿನಿಂದ ಸೃಷ್ಟಿಸುತ್ತಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. 2028ರ ಚುನಾವಣೆ ಮಹತ್ವದ್ದು. 2023ರಲ್ಲಿ ಹೇಗೆ ಒಟ್ಟಿಗೆ ಕೆಲಸ ಮಾಡಿದ್ದೇವೋ, ಅದೇ ರೀತಿ ಮುಂದೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಸ್ಪಷ್ಟಪಡಿಸಿದ್ದು,
ಕೇಂದ್ರದಲ್ಲಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಹೈಕಮಾಂಡ್ ರಾಜ್ಯದ ವಿಷಯವನ್ನು ನಮಗೆ ಬಗೆಹರಿಸಲು ಹೇಳಿದೆ. ನಾವೂ ಹೈಕಮಾಂಡ್ ಸೂಚನೆ ಪಾಲನೆ ಮಾಡುವ ನಿರ್ಧಾರಕ್ಕೆ ಬಂದಿದ್ದೇವೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ ಎಂದರು.
ಇದೇ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಒಂದೇ ಗುಂಪು ಇದ್ದರೆ ಅದು ಕಾಂಗ್ರೆಸ್ ಗುಂಪು. ನಾನು ಮತ್ತು ಮುಖ್ಯಮಂತ್ರಿ ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. 2028ರಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದರು. ಜೊತೆಗೆ 2029ರ ಲೋಕಸಭೆ ಚುನಾವಣೆಗೆ
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರ್ನಾಟಕದಿಂದ ಹೆಚ್ಚಿನ ಶಕ್ತಿ ನೀಡುತ್ತೇವೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa