
ಹೊಸಪೇಟೆ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಸಮೀಕ್ಷೆ ಕಾರ್ಯಕ್ರಮವನ್ನು ನ.3 ರಿಂದ ನ.19 ರವರೆಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಅಧಿಕಾರಿಗಳು ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ್ ಅವರು ಹೇಳಿದ್ದಾರೆ.
ನಗರದ ಡ್ಯಾಂ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಅವರು ಮಾತನಾಡಿದರು.
ಒಟ್ಟು ಹದಿನಾಲ್ಕು ದಿನಗಳ ಕಾಲ ಜರುಗುವ ಆಂದೋಲನ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯಿಂದ ಮನೆ ಮನೆಗೆ ಭೇಟಿ ಮಾಡಿ ಚರ್ಮ ಮತ್ತು ನರಗಳ ತಪಾಸಣೆ ನಡೆಸಲಾಗುತ್ತದೆ. ಕುಷ್ಠರೋಗ ದೃಢಪಟ್ಟ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಸಕಾಲಕ್ಕೆ ಚಿಕಿತ್ಸೆ ಪಡೆಯುವುದರಿಂದ ಅಂಗವೈಕಲ್ಯತೆ ತಡೆಗಟ್ಟಬಹುದು ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಧಿಕ.ಕೆ ಮಾತನಾಡಿ, ಕುಷ್ಠರೋಗ ಆಂದೋಲನ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ 624 ತಂಡಗಳನ್ನು ರಚಿಸಿಕೊಂಡು 174695 ಮನೆಗಳನ್ನು 14 ದಿನಗಳಲ್ಲಿ ಸಮೀಕ್ಷೆ ನಡೆಸುವ ಗುರಿಯನ್ನು ಹೊಂದಲಾಗಿದೆ. ಒಂದು ತಂಡದಲ್ಲಿ ಇಬ್ಬರು ಸದಸ್ಯರಿದ್ದು, ಒಂದು ತಂಡವು ಒಂದು ದಿನದಲ್ಲಿ 20 ಮನೆಗಳಿಗೆ ಭೇಟಿ ನೀಡಿ ಮನೆಯಲ್ಲಿನ ಪ್ರತಿಯೊಬ್ಬರ ತಪಾಸಣೆ ನಡೆಸಲಿದೆ. ಜಿಲ್ಲೆಯಲ್ಲಿ ಸದ್ಯ 76 ಕುಷ್ಠರೋಗ ಪ್ರಕರಣಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಈ ಸಮೀಕ್ಷೆಯಲ್ಲಿ ಹೆಚ್ಚಿನ ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಉಂಟಾಗುವ ಅಂಗವೈಕಲ್ಯತೆಯನ್ನು ತಡೆಗಟ್ಟಬಹುದಾಗಿರುತ್ತದೆ ಎಂದರು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ವಿನೋದ್, ಜಿಲ್ಲಾ ಕುಷ್ಠರೋಗ ಸಲಹೆಗಾರ ಡಾ.ಕೊಟ್ರೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್, ಡಾ.ಮೌನೇಶ್ ಸೇರಿದಂತೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್