
ಹುಬ್ಬಳ್ಳಿ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವವನ್ನು ನವೆಂಬರ್ 5ರಂದು ಬೆಳಿಗ್ಗೆ 11.30ಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಡಾ.ಸಿ.ಬಸವರಾಜು ಹೇಳಿದರು.
ಹುಬ್ಬಳ್ಳಿ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘನತೆವೆತ್ತ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು.
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹಕುಲಾಧಿಪತಿಗಳಾದ ಡಾ.ಎಚ್.ಕೆ. ಪಾಟೀಲ್ ಗೌರವ ಅತಿಥಿಗಳಾಗಿ ಆಗಮಿಸುವರು.
ಕರ್ನಾಟಕ ರಾಜ್ಯ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಶಿವರಾಜ್ ವಿ. ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು. ಆಂಧ್ರಪ್ರದೇಶದ ರಾಜ್ಯಪಾಲರಾದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಹಾಗೂ ಹಿರಿಯ ನ್ಯಾಯವಾದಿ ವಿ.ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಆಡಳಿತಾಂಗ ಕುಲಸಚಿವರಾದ ಗೀತಾ ಕೌಲಗಿ, ಮೌಲ್ಯಮಾಪನ ಕುಲಸಚಿವರು ಹಾಗೂ ಡೀನ್ ಪ್ರೊ. ಡಾ. ರತ್ನಾ ಆರ್. ಭರಮಗೌಡರ್, ಪ್ರಾಧ್ಯಾಪಕರು, ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa