ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರ : ಸಿದ್ದತಾ ಸಭೆ
ರಾಯಚೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತದಿಂದ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರಕ್ಕೆ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ಅಧಿಕಾರಿಗಳಿಗೆ
ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರ: ಸಿದ್ದತಾ ಸಭೆ


ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರ: ಸಿದ್ದತಾ ಸಭೆ


ರಾಯಚೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತದಿಂದ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರಕ್ಕೆ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಯಚೂರು ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯ ಆಗಬೇಕು ಎಂಬುದಾಗಿ ಯೋಚಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಈ ತರಬೇತಿ ಶಿಬಿರ ಆಯೋಜಿಸಿದೆ. ನವಂಬರ್ 8 ರೊಳಗಡೆ ನೋಂದಣಿ ಮಾಡಬೇಕು. ತರಬೇತಿಯಲ್ಲಿ ಅರ್ಥಶಾಸ್ತ್ರ, ಭೌಗೋಳ ಶಾಸ್ತ್ರ, ಪರಿಸರ ಅಧ್ಯಯನ, ವಿಜ್ಞಾನ ಮತ್ತು ತಂತ್ರಜ್ಞಾನ, ಭಾರತ ಸಂವಿಧಾನ, ಇತಿಹಾಸ ಸೇರಿದಂತೆ ಹಲವು ವಿಷಯಗಳ ಕುರಿತು ನುರಿತ ಉಪನ್ಯಾಸಕರು ಬೋಧನೆ ಮಾಡಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತಾಗಬೇಕು ಎಂದು ತಿಳಿಸಿದರು.

ನವೆಂಬರ್ 12ರಂದು ಅರ್ಹತಾ ಪರೀಕ್ಷೆ: ಈ ತರಬೇತಿ ಶಿಬಿರದ ಅರ್ಹತಾ ಪರೀಕ್ಷೆಯನ್ನು ನವೆಂಬರ್ 12ರ ಮಧ್ಯಾಹ್ನ 3 ರಿಂದ 4.30ರವರೆಗೆ ರಾಯಚೂರಿನ ಜಿಲ್ಲಾ ರಂಗಮಂದಿರ ಹತ್ತಿರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಮೊದಲ 100 ಅಭ್ಯರ್ಥಿಗಳಿಗೆ ಮಾತ್ರ ತರಬೇತಿಗೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷೆಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ವಸತಿ ನಿಲಯಗಳಲ್ಲಿ ಜಾಗೃತಿ ಮೂಡಿಸಿ: ಸರ್ಕಾರಿ ನೌಕರಿ ಕನಸು ಕಟ್ಟಿಕೊಂಡು ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದು, ಅಂತಹ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸುವಂತಾಗಲು ರಾಯಚೂರು ನಗರ ಸೇರಿದಂತೆ ಜಿಲ್ಲೆಯ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯಪಾಲಕರ ಮೂಲಕ ಮಾಹಿತಿ ಒದಗಿಸಲು

ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತ ಬಿಸಿಎಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧೂರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಘಟಕಾಂಬಳೆ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande