
ಬೆಳಗಾವಿ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿಯ 2022-23 ಮತ್ತು 2023-24 ಸಾಲಿನ ಗೌರವ ಪ್ರಶಸ್ತಿ, ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಬಾಲ ಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ಕೆ ಮಾಡಿರುವ ಪ್ರಶಸ್ತಿ ಪುರಸ್ಕೃತರು ಆಗಮಿಸಲಿದ್ದಾರೆ.
ಈ ಪ್ರಶಸ್ತಿಗಳು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆಯಾಗಲಿವೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa