
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂಲಸೌಕರ್ಯ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.
ವಿಶೇಷವಾಗಿ ಒಬಿಸಿ ಹಾಗೂ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಸಮರ್ಪಕ ಮೂಲಸೌಕರ್ಯ ಒದಗಿಸಲಾಗಿಲ್ಲ, ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ಸೀಟುಗಳನ್ನೂ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಗಂಭೀರ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹಾಸ್ಟೆಲ್‌ಗಳಲ್ಲಿ ವಸತಿ, ಆಹಾರ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು, ಶಿಕ್ಷಣಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಶೋಕ ಹೇಳಿದ್ದಾರೆ.
ಸ್ವಘೋಷಿತ ‘ಅಹಿಂದ ನಾಯಕ’ ಎಂದು ಕರೆದುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ತಕ್ಷಣ ಆಲಿಸಿ, ಶೀಘ್ರ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವು ಹಾಸ್ಟೆಲ್ ವ್ಯವಸ್ಥೆಯ ಸುಧಾರಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಅರ್ಹ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಖಚಿತಪಡಿಸಬೇಕು ಎಂದು ಎಂದು ಅಶೋಕ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa