
ಗದಗ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದರೂ, ಸಮರ್ಪಕ ರಸ್ತೆ ಇಲ್ಲದ ಕಾರಣ ರೋಗಿಗಳು ಚಿಕಿತ್ಸೆ ಪಡೆಯಲು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ವೈದ್ಯರು, ಸಿಬ್ಬಂದಿ ಹಾಗೂ ಔಷಧಿ ಸೌಲಭ್ಯಗಳಿದ್ದರೂ, ಆಸ್ಪತ್ರೆಗೆ ತಲುಪುವ ಮಾರ್ಗವೇ ದುಸ್ಥಿತಿಯಲ್ಲಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ಹೊರವಲಯದಲ್ಲಿ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಪ್ರಾಥಮಿಕ ಆರೋಗ್ಯ ಕೇಂದ್ರವು ಹುಯಿಲಗೋಳ, ಕಿರಟಗೇರಿ, ಚಿಕ್ಕೊಪ್ಪ, ಹಿರೇಕೋಪ್ಪ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಅನುಕೂಲವಾಗಬೇಕಿತ್ತು. ಆದರೆ ಗ್ರಾಮದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಹೋಗಲು ಹಳ್ಳದ ಮೂಲಕ ನಡೆದುಕೊಂಡು ಹೋಗಬೇಕಾಗಿದ್ದು, ಮಾರ್ಗದಾದ್ಯಂತ ಮುಳ್ಳು ಕಂಟಿಗಳು ಬೆಳೆದಿವೆ. ವಿಷಜಂತುಗಳ ಭೀತಿ ಬೇರೆ ಇದ್ದು, ರೋಗಿಗಳು ಹಳ್ಳದಲ್ಲಿ ನಡೆದುಕೊಂಡೇ ಆಸ್ಪತ್ರೆಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆಗಾಲ ಆರಂಭವಾದರೆ ಈ ಮಾರ್ಗ ಸಂಪೂರ್ಣ ಕೆಸರು ತುಂಬಿಕೊಂಡು ಸಂಚಾರಕ್ಕೆ ಅಸಾಧ್ಯವಾಗುತ್ತದೆ. ಪರಿಣಾಮ ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಹಾಗೂ ಇತರೆ ವಾಹನಗಳು ಆಸ್ಪತ್ರೆಗೆ ತಲುಪಲು ಸಾಧ್ಯವಾಗುತ್ತಿಲ್ಲ. ಅಪಘಾತ, ಹೆರಿಗೆ ಸೇರಿದಂತೆ ತುರ್ತು ಚಿಕಿತ್ಸೆಗೆ ಈ ಆರೋಗ್ಯ ಕೇಂದ್ರ ಉಪಯೋಗವಾಗದೇ ಇರುವುದರಿಂದ ಜನರು ಖಾಸಗಿ ಆಸ್ಪತ್ರೆಗಳು ಅಥವಾ ಗದಗ ನಗರದ ಜಿಮ್ಸ್ ಆಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರ್ಕಾರ ಅಗತ್ಯ ಸೌಕರ್ಯಗಳನ್ನು ಒದಗಿಸಿದ್ದು, ವೈದ್ಯರು ಹಾಗೂ ಸಿಬ್ಬಂದಿ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಒಪ್ಪಿಕೊಂಡಿದ್ದಾರೆ. ಆದರೆ ರಸ್ತೆ ಸಮಸ್ಯೆ ಇರುವುದರಿಂದ ಆಸ್ಪತ್ರೆಯ ಪ್ರಯೋಜನ ಬಡ ಜನರಿಗೆ ಸಿಗುತ್ತಿಲ್ಲ ಎಂಬುದು ಅವರ ಅಳಲು. ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಆಸ್ಪತ್ರೆಗೆ ಹೋಗಲು ಕೂಡಾ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಕ್ಷೇತ್ರದ ಶಾಸಕ ಸಿ.ಸಿ. ಪಾಟೀಲ್ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಕ್ಷಣ ಗಮನಹರಿಸಿ, ಗ್ರಾಮದಿಂದ ಆಸ್ಪತ್ರೆಗೆ ಹೋಗುವಂತೆ ಸಮರ್ಪಕ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಷ್ಟು ದೊಡ್ಡ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೂ, ಅದರ ಸದುಪಯೋಗಕ್ಕೆ ರಸ್ತೆ ಅಗತ್ಯವಾಗಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳದಿದ್ದರೆ ಜನರ ಆಕ್ರೋಶ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP