
ದಾವಣಗೆರೆ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ :ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಹಿರಿಯ ಮುತ್ಸದ್ದಿ ನಾಯಕ, ಶಾಮನೂರು ಶಿವಶಂಕರಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚು ಕಾಲ ಅವರು ಸಲ್ಲಿಸಿದ ಸೇವೆ ಅನುಪಮವಾಗಿದೆ. ದಾವಣಗೆರೆ ತಾಲೂಕನ್ನು ಜಿಲ್ಲೆಯಾಗಿ ರೂಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಅಪಾರ ಶ್ರಮ ವಹಿಸಿದ್ದರು.
ಮಹಾಸಭೆಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ನನ್ನ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಶಾಮನೂರು ಅವರು ನನಗೂ ಮಾರ್ಗದರ್ಶಕರಾಗಿದ್ದರು.
ನೇರ, ನಿಷ್ಠುರ ವಾದಿಯಾಗಿದ್ದ ಅವರ ಅಗಲಿಕೆಯಿಂದ ರಾಜ್ಯ ಹಾಗೂ ರಾಷ್ಟ್ರ ಒಬ್ಬ ಮಹಾನ್ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa