
ಮಂಡ್ಯ, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶ್ರೀ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ಆಯೋಜಿಸಲಾದ ವೇದಿಕೆ ಕಾರ್ಯಕ್ರಮವನ್ನು ಮಧ್ಯಾಹ್ನ ೩.೧೫ಕ್ಕೆ ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ಮಹೋತ್ಸವ ನಡೆಯಲಿದೆ. ಡಿಸೆಂಬರ್ 16ರಿಂದ 22ರವರೆಗೆ ಏಳು ದಿನಗಳ ಕಾಲ ಬೃಹತ್ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಸುಮಾರು 30 ಎಕರೆ ಪ್ರದೇಶದಲ್ಲಿ ಜಯಂತಿ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa