ಕಾಂಗ್ರೆಸ್ ಬಣ ಬಡಿದಾಟದಿಂದ ಅನುದಾನ ತಾರತಮ್ಯ : ಆರ್. ಅಶೋಕ ಆರೋಪ
ಬೆಂಗಳೂರು, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಧಿಕಾರದಲ್ಲಿರುವ ಆಡಳಿತ ಪಕ್ಷಗಳು ಪ್ರತಿ ಪಕ್ಷಗಳ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನದಲ್ಲಿ ತಾರತಮ್ಯ ತೋರುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ
Ashok


ಬೆಂಗಳೂರು, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಧಿಕಾರದಲ್ಲಿರುವ ಆಡಳಿತ ಪಕ್ಷಗಳು ಪ್ರತಿ ಪಕ್ಷಗಳ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನದಲ್ಲಿ ತಾರತಮ್ಯ ತೋರುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ.

ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಒಳಬಣ ಬಡಿದಾಟ ಅತಿದೂರಕ್ಕೆ ಹೋಗಿದ್ದು, ಇದೀಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿಯೇ ಅನುದಾನ ತಾರತಮ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಸದನದಲ್ಲೇ ಕೇಳಿಬರುತ್ತಿವೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಆರ್. ಅಶೋಕ, “ಯಾವುದೇ ರಾಗ–ದ್ವೇಷವಿಲ್ಲದೆ, ಇಡೀ ರಾಜ್ಯಕ್ಕೆ ನಿಷ್ಪಕ್ಷಪಾತವಾಗಿ ಮುಖ್ಯಮಂತ್ರಿಯಾಗಿ ಕೆಲಸ ಮಾಡುವೆನೆಂದು ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗಳು, ತಮ್ಮದೇ ಪಕ್ಷದೊಳಗಿನ ವಿರೋಧಿ ಬಣದ ಶಾಸಕರಿಗೆ ಅನುದಾನ ತಾರತಮ್ಯ ಮಾಡುತ್ತಿರುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಒಳಜಗಳದ ಪರಿಣಾಮವಾಗಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಇದರಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಆಡಳಿತ ಪಕ್ಷದೊಳಗಿನ ಅಧಿಕಾರ ಹಂಚಿಕೆ ಮತ್ತು ಬಣ ರಾಜಕಾರಣ ರಾಜ್ಯದ ಆಡಳಿತಕ್ಕೆ ಧಕ್ಕೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇಂತಹ ಸಂವಿಧಾನ ವಿರೋಧಿ ನಡೆಗಳನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ರಾಜ್ಯದ ಎಲ್ಲಾ ಕ್ಷೇತ್ರಗಳಿಗೆ ಸಮಾನ ಅನುದಾನ ಮತ್ತು ನ್ಯಾಯಸಮ್ಮತ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರ್. ಅಶೋಕ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande