
ವಿಜಯಪುರ, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ವೋಚ್ಚ ನ್ಯಾಯಾಲಯವು ಈಗಾಗಲೇ ಆದೇಶಿಸಿದಂತೆ ಸಾರ್ವಜನಿಕ ಸ್ಥಳ, ಸರ್ಕಾರಿ ಕಚೇರಿ, ಆಸ್ಪತ್ರೆ, ಶಾಲಾ-ಕಾಲೇಜು, ಬಸ್ ನಿಲ್ದಾಣ ಹಾಗೂ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಗುರುತಿಸಿ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಬೇಕು. ತಾತ್ಕಾಲಿಕ ಪರಿಹಾರವಾಗಿ ಆಶ್ರಯತಾಣದಲ್ಲಿ ಕಳುಹಿಸಬೇಕು. ಜಿಲ್ಲೆಯ ನಗರ, ಗ್ರಾಮ ಪಂಚಾಯತಿಗಳಲ್ಲಿ ಯೋಜನೆ ರೂಪಿಸಿ, ಬೀದಿ ನಾಯಿಗಳ ನಿಯಂತ್ರಣಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು. ಬೀದಿ ನಾಯಿಗಳಿಗೆ ಲಸಿಕೆ ಹಾಕಬೇಕು. ಲಸಿಕೆ ಹಾಕಿದ ಕುರಿತು ಗುರುತಿಗಾಗಿ ಬಣ್ಣ ಹಚ್ಚಬೇಕು. ಈಗಾಗಲೇ ಪಶು ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯವಿದ್ದು ನಗರ ಪಾಲಿಕೆ, ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಶು ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ವಹಿಸಬೇಕು. ಎಲ್ಲ ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಬೀದಿನಾಯಿಗಳ ಚಲನವಲನ ಕುರಿತು ಒಬ್ಬ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಯಾವುದೇ ಕಚೇರಿ ಹಾಗೂ ಸಾರ್ವಜನಿಕ ಸ್ಥಳದ ಆವರಣದಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಆ ಕಚೇರಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಇದನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಸರ್ವೋಚ್ಚ ನ್ಯಾಯಾಲಯದ ಅದೇಶಗಳನ್ನು ಪಾಲಿಸಿ, ಮುಂದಿನ ಸಭೆಯಲ್ಲಿ ಎಲ್ಲ ವಿವರಗಳ ಪೂರ್ಣ ಮಾಹಿತಿ ಒದಗಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ನಗರ ಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳು ಸಾರ್ವಜನಿಕರಿಂದ ವಿವಿಧ ಕರ ವಸೂಲಿ ಪ್ರಗತಿ ಸಾಧಿಸಿ, ಕರ ವಸೂಲಿಯಾದ ಅನುದಾನವನ್ನು ಗ್ರಂಥಾಲಯ, ವಿದ್ಯುತ್ ಬಿಲ್ ಹಿಂಬಾಕಿ ಪಾವತಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನುದಾನ ಬಳಸಿದ ಕುರಿತು ಕಚೇರಿಯ ಪ್ರದರ್ಶನ ಫಲಕಗಳಲ್ಲಿ ಪ್ರಚುರಪಡಿಸಬೇಕು.
ಕೊಳಚೆ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ,ಒಳಚರಂಡಿ ವ್ಯವಸ್ಥೆ, ರಸ್ತೆಗಳನ್ನು ಸಮರ್ಪಕವಾಗಿ ಒದಗಿಸಿ, ಅಲ್ಲಿ ವಾಸಿಸುತ್ತಿರುವವರಿಗೆ ತೊಂದರೆಯಗದ0ತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ, ಬಾಡಿಗೆ ಕಟ್ಟಡ ಹೊಂದಿರುವ ಸಮಗ್ರ ಮಾಹಿತಿ ಒದಗಿಸಬೇಕು.ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕುಡಿಯುವ ನೀರಿನ ಸಂಗ್ರಹಾಗಾರ ಆಗಾಗ ಸ್ವಚ್ಚಗೊಳಿಸಬೇಕು ಸ್ವಚ್ಚಗೊಳಸಿದ ಕುರಿತು ಲಾಗ್ ಪುಸ್ತಕದಲ್ಲಿ ನಮೂದಿಸಬೇಕು. ಬೋರ್‌ವೆಲ್‌ಗಳ ಸುತ್ತಲೂ ಸ್ವಚ್ಚಗೊಳಿಸಿ, ಕಲುಷಿತ ನೀರು ಸೇರದಂತೆ ನಿಗಾವಹಿಸಬೇಕು. ಮಹಾ ನಗರಪಾಲಿಕೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ನೀರು ಸರಬರಾಜು ಹಾಗೂ ಬೀದಿ ದೀಪಗಳ ನಿರ್ವಹಣೆಯ ವಿದ್ಯುತ್ ಬಿಲ್ ಪರಿಶೀಲಿಸಿ, ನಿಖರವಾದ ಮಾಹಿತಿ ನೀಡಿದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಗಸ್ಟ್ 8ರಿಂದ ಆರಂಭಗೊ0ಡ ಕಸ ಕಂಡರೆ ಫೋಟೋ ಕಳಿಸಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಇನ್ನೂ ವ್ಯಾಪಕವಾಗಿ ಈ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿ, ಸ್ವಚ್ಛ ನಗರವನ್ನಾಗಿಸಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಧಿಕಾರಿಗಳು ಆಗಾಗ ಅನಿರಿಕ್ಷೀತ ಭೇಟಿ ನೀಡಿ, ಅಲ್ಲಿರುವ ಆಹಾರ ಗುಣಮಟ್ಟ, ಶುಚಿರುಚಿ ಹಾಗೂ ಅಲ್ಲಿನ ಸ್ವಚ್ಛತೆ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತಕುಮಾರ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ, ಮಹಾನಗರ ಪಾಲಿಕೆ ಅಧಿಕಾರಿಗಳು, ಹೆಸ್ಕಾಂ ಅಧಿಕಾರಿಗಳು, ಪಟ್ಟಣ ಪಂಚಾಯತ, ನಗರಸಭೆ, ಪುರಸಭೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande