
ಬೆಳಗಾವಿ, 18 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಖಾಸಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಇತರೆ ಸಂಘಟನೆಗಳ ಗುಂಡಾವರ್ತನೆ ಮತ್ತು ಕಿರುಕುಳವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ (ರಿ) ರಾಣೆಬೆನ್ನೂರು ತಾಲ್ಲೂಕು ಘಟಕದ ವತಿಯಿಂದ ಬೆಳಗಾವಿ ಸುವರ್ಣಸೌಧದ ಬಳಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಎಂ.ಬಿ.ಪಾಟೀಲ ಭೇಟಿ ನೀಡಿ, ಅಹವಾಲು ಆಲಿಸಿ, ಮನವಿ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಅವರು, ರೈತರಿಗೆ ಮೈಕ್ರೋ ಫೈನಾನ್ಸ್ ಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಗಡಿಭಾಗ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೆರೆ ರಾಜ್ಯಗಳ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಿಯಮಗಳನ್ನು ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ವ್ಯವಹಾರ ನಡೆಸುತ್ತಾ ಕಿರುಕುಳ ನೀಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ನಮ್ಮ ಸರ್ಕಾರ ರೈತರ ಪರವಾಗಿದ್ದು, ರೈತರ ಹಿತಾಸಕ್ತಿಯ ರಕ್ಷಣೆಗೆ ಸಂಪೂರ್ಣವಾಗಿ ಬದ್ಧವಾಗಿದೆ. ಈ ಕುರಿತು ಮುಖ್ಯಮಂತ್ರಿಗಳು, ಕಾನೂನು ಸಚಿವರು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿ, ಇನ್ನಷ್ಟು ತೀಕ್ಷ್ಣ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa