

ಬಳ್ಳಾರಿ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಖಂಡ ಬಳ್ಳಾರಿ ಜಿಲ್ಲೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದ್ದು ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರೂ ಶ್ರಮಿಸೋಣ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ ಅವರು ಕರೆ ನೀಡಿದ್ದಾರೆ.
ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು `ಕನ್ನಡ ಭವನ'ದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ಗಣನೀಯ ಸೇವೆ ಸಲ್ಲಿಸಿ ಸಾಧನೆ ಮಾಡಿರುವವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ 1958 ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. 68 ವರ್ಷಗಳ ನಂತರ ಈ ಅವಕಾಶ ಬಳ್ಳಾರಿಗೆ ಬಂದಿದೆ. ಈ ಸಮ್ಮೇಳನವು ಗಡಿನಾಡಾಗಿರುವ ಬಳ್ಳಾರಿಯಲ್ಲಿ ಕನ್ನಡಿಗರ ಅಂತಃಶಕ್ತಿ ಮತ್ತು ಆತ್ಮಸ್ಥೈರ್ಯಕ್ಕೆ ಪೂರಕವಾಗಿ ನಡೆಯುತ್ತಿದೆ. ಕಾರಣ ಸಮ್ಮೇಳನದ ಯಶಸ್ವಿಗೆ ಪ್ರತಿಯೊಬ್ಬರೂ ಶ್ರಮಿಸೋಣ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಜಿಲ್ಲಾ ಅಧ್ಯಕ್ಷರಾಗಿರುವ ಡಾ. ನಿಷ್ಠಿ ರುದ್ರಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬೇರುಗಳನ್ನು ಗಡಿ ಜಿಲ್ಲೆಯಲ್ಲಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವು ಪೂರಕ. ಬಳ್ಳಾರಿಯಲ್ಲಿ ನಡೆಯಲಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಕರ್ನಾಟಕ ಸರ್ಕಾರ 2025-26 ನೇ ಸಾಲಿನ ಆಯವ್ಯಯದಲ್ಲಿ 10 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲು ಮಾಡಿದೆ ಎಂದರು.
ಬಳ್ಳಾರಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ, ಕರ್ನಾಟಕ `ಸಹಕಾರ ರತ್ನ' ಪ್ರಶಸ್ತಿ ಪುರಸ್ಕøತ ವೆಂಕಟೇಶ್ ಹೆಗಡೆ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಯಾಳ್ಪಿ ವಲಿ ಭಾಷಾ, `ಉತ್ತಮ ಸಹಕಾರ ಸಂಘ' ಪ್ರಶಸ್ತಿ ಪುರಸ್ಕೃತ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಪೆÇಂಪನಗೌಡ, `ಬಳ್ಳಾರಿ ಜಿಲ್ಲಾ ಶ್ರೇಷ್ಠ ಸಹಕಾರಿ' ಪ್ರಶಸ್ತಿ ಪುರಸ್ಕøತ ಗುಡಾರದ ನೀಲಕಂಠಪ್ಪ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಹೈ ತೋರಣಗಲ್ಲು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಚ್. ಹಂಪನಗೌಡ, ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸತ್ಯನಾರಾಯಣ ಅವರು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಸಾಪ ಗ್ರಾಮೀಣ ಘಟಕದ ಅಧ್ಯಕ್ಷ ಎರ್ರಿಸ್ವಾಮಿ ಸ್ವಾಮಿಹಳ್ಳಿ ಅವರು ಪ್ರಾರ್ಥನೆ ಸಲ್ಲಿಸಿದರು. ನಿವೃತ್ತ ಪೋಲೀಸ್ ಇನ್ಸ್‍ಪೆಕ್ಟರ್ ಹುಸೇನಸಾಬ್ ಮತ್ತು ಜಡೇಶ ಎಮ್ಮಿಗನೂರು ಅವರು ಕನ್ನಡ ಗೀತ ಗಾಯನ ನಡೆಸಿಕೊಟ್ಟರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್