
ಬೆಂಗಳೂರು, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ರಾಜ್ಯದ ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಹಾಗೂ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದರು. ಈ ವೇಳೆ ದಾಖಲೆಗಳು ಹಾಗೂ ಆಸ್ತಿ ವಿವರಗಳ ಪರಿಶೀಲನೆ ನಡೆಸಲಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ನರಗುಂದದಲ್ಲಿನ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಯಿತು. ಇದೇ ವೇಳೆ ಬಾಗೇವಾಡಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆಯ ಮೇಲೆಯೂ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕೋಲಾ ಶಿರಸಿ ಗ್ರಾಮ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರುತಿ ಯಶವಂತ ಮಾಳವಿ ಅವರ ನಿವಾಸದಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಸಹಾಯಕ ಇಂಜಿನಿಯರ್ ವಿಜಯಲಕ್ಷ್ಮೀ ಅವರ ನಿವಾಸದಲ್ಲೂ ಲೋಕಾಯುಕ್ತ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa