
ಬೆಂಗಳೂರು, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗೊಂದಲಗಳು ಮುಂದುವರಿದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ.
ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಲಿದ್ದು, ಇದೇ ವೇಳೆ ಪಕ್ಷದ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ರಾಜ್ಯದ ನಾಯಕತ್ವ ವಿಚಾರವಾಗಿ ಮತ್ತೊಂದು ಸುತ್ತಿನ ಚರ್ಚೆ ನಡೆಯಬಹುದೇ ಎಂಬ ಕುತೂಹಲ ಹೆಚ್ಚಾಗಿದೆ.
ದೆಹಲಿಯಲ್ಲಿ ನಾಳೆ ನಡೆಯುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಮುಂದಿನ ಹೋರಾಟಗಳು ಹಾಗೂ ರಾಜಕೀಯ ತಂತ್ರಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಗೆ ಕಾರ್ಯಕಾರಿ ಸದಸ್ಯರ ಜೊತೆಗೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಅದರಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖುವಿಂದರ್ ಸಿಂಗ್ ಸುಖು ಅವರಿಗೆ ಆಹ್ವಾನ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಕಾರ್ಯಕಾರಿ ಸಭೆಯಲ್ಲಿ ಭಾಗಿಯಾದ ಬಳಿಕ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಸಂಬಂಧಿತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ರಾಜಕೀಯವಾಗಿ ಮಹತ್ವ ಪಡೆದಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಲಯದಲ್ಲಿ ಯಾವ ಸಂದೇಶ ಹೊರಬೀಳಲಿದೆ ಎಂಬುದರ ಮೇಲೆ ಗಮನ ಕೇಂದ್ರೀಕೃತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa