
ಬೀದರ್, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಇಂದು ಬೀದರ್ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಭಾಗವಹಿಸಿದರು. ಈ ವೇಳೆ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ವಹಿಸಿದ ಐತಿಹಾಸಿಕ ಪಾತ್ರವನ್ನು ಸ್ಮರಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ನಾಯಕರ ಅಮೂಲ್ಯ ಕೊಡುಗೆಗಳನ್ನು ನೆನಪಿಸಿದರು.
ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಂವಿಧಾನ ರಚನೆ, ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸ್ಥಾಪನೆ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಬಲಪಡಿಸುವಲ್ಲಿ ಕಾಂಗ್ರೆಸ್ ಪಕ್ಷ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದರು. ಬಡವರು ಹಾಗೂ ದುರ್ಬಲ ವರ್ಗಗಳ ಸಬಲೀಕರಣ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ನೀಡಿರುವ ಕೊಡುಗೆಗಳು ಅನನ್ಯವಾಗಿವೆ ಎಂದರು.
ಕಾಂಗ್ರೆಸ್ ಪಕ್ಷ ಕೇವಲ ರಾಜಕೀಯ ಪಕ್ಷವಲ್ಲ; ಅದು ದೇಶದ ಏಕತೆ, ಸಮಾನತೆ, ಸೌಹಾರ್ದತೆ ಮತ್ತು ಸರ್ವಜನ ಕಲ್ಯಾಣದ ಚಳವಳಿಯಾಗಿದೆ. ಈ ಮಹಾನ್ ಪರಂಪರೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಸಚಿವ ಖಂಡ್ರೆ ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa