
ಬೆಂಗಳೂರು, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಸಭೆ ನಡೆಸಿದರು.
ಬೆಂಗಳೂರು ನಗರದಲ್ಲಿ ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಇನ್ನು ಕೆಲವು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ ಅವರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ರವರು, ಜಂಟಿ ಪೊಲೀಸ್ ಆಯುಕ್ತರುಗಳಾದ ರಮೇಶ್ ಬಾನೋಥ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa