
ಬೆಂಗಳೂರು, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರ ಆಂಟಿ ನಾರ್ಕೋಟಿಕ್ಸ್ ಟಾಸ್ಕ್ ಫೋರ್ಸ್ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ₹55.88 ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದು. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಮುಂಬೈನಲ್ಲಿ ನಡೆದ ಡ್ರಗ್ಸ್ ವಶಪಡಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಬ್ದುಲ್ಲಾ ಖಾದರ್ ಶೇಕ್ ವಿಚಾರಣೆಯಲ್ಲಿ ನೀಡಿದ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ತನಿಖೆಯ ಭಾಗವಾಗಿ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಅನ್ನು ಬಂಧಿಸಲಾಗಿದ್ದು, ಆತನ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ಮಹಾರಾಷ್ಟ್ರ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದರು.
ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಸ್ಪಂದನ ಲೇಔಟ್ ಕಾಲೋನಿ, ಕೊತ್ತನೂರು ಠಾಣೆ ವ್ಯಾಪ್ತಿಯ ಎನ್.ಜಿ. ಗೋಲ್ಲಹಳ್ಳಿ ಪ್ರದೇಶದಲ್ಲಿರುವ ‘RJ ಈವೆಂಟ್’ ಹೆಸರಿನ ಕಾರ್ಖಾನೆ ಹಾಗೂ ಅವಲಹಳ್ಳಿ ಠಾಣೆ ವ್ಯಾಪ್ತಿಯ ಯರಪ್ಪನಹಳ್ಳಿ ಮನೆಯಲ್ಲಿ ಡ್ರಗ್ಸ್ ತಯಾರಿಕಾ ಘಟಕಗಳು ಪತ್ತೆಯಾಗಿವೆ.
ದಾಳಿಯ ವೇಳೆ 4.1 ಕೆಜಿ ಘನ ಎಂಡಿಎಂಎ ಮತ್ತು 17 ಕೆಜಿ ದ್ರವ ಎಂಡಿಎಂಎ ಸೇರಿ ಒಟ್ಟು 21.4 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ₹55.88 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಡ್ರಗ್ಸ್ ಫ್ಯಾಕ್ಟರಿಗಳಿಂದ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಮಾದಕ ವಸ್ತು ಪೂರೈಕೆ ಮಾಡಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.
ಡ್ರಗ್ಸ್ ಜಾಲದ ಪ್ರಮುಖ ರೂವಾರಿಗಳೆಂದು ಶಂಕಿಸಲ್ಪಟ್ಟಿರುವ ರಾಜಸ್ಥಾನ ಮೂಲದ ಯೋಗಿರಾಜ್ ಕುಮಾರ್ ಮತ್ತು ನಯನ್ ಪವರ್ ಕುರಿತು ಮಾಹಿತಿ ಸಂಗ್ರಹ ನಡೆಯುತ್ತಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa