ಮುಖ್ಯಮಂತ್ರಿಗಳಿಂದ ಮೂಲಸೌಕರ್ಯ ಮತ್ತು ರೈಲ್ವೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ, ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಿಗದಿತ
Cm meeting


ಬೆಂಗಳೂರು, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ, ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಿಗದಿತ ಅವಧಿಯೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿ ಇರಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

2023–24ನೇ ಸಾಲಿನಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ.25 ಕೋಟಿ ಅನುದಾನದಂತೆ ಒಟ್ಟು ರೂ.3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ರೂ.2040 ಕೋಟಿ ಮೊತ್ತದ ಕಾಮಗಾರಿಗಳು (ಶೇ.58) ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ. ಬಾಕಿ ರೂ.1205 ಕೋಟಿ ಬಿಡುಗಡೆಗೆ ಬೆಳಗಾವಿ ವಿಧಾನಮಂಡಲ ಅಧಿವೇಶನದ ವೇಳೆ ಆದೇಶ ನೀಡಲಾಗಿದೆ. ಪೂರ್ಣಗೊಂಡ ಕಾಮಗಾರಿಗಳ ಬಿಲ್ಲುಗಳನ್ನು ತಕ್ಷಣ ಪಾವತಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

2024–25ನೇ ಸಾಲಿನಲ್ಲಿ ಮಳೆ ಹಾನಿಯಿಂದ ಹಾಳಾದ ರಸ್ತೆಗಳ ದುರಸ್ತಿಗೆ ರೂ.1890 ಕೋಟಿ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ರೂ.250 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇನ್ನು 2025–26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.8666.50 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮೊದಲ ಹಂತವಾಗಿ ರೂ.1000 ಕೋಟಿ ಬಿಡುಗಡೆ ಮಾಡಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಹಾಗೂ ಅನುದಾನ ಪಾವತಿ ಮಾಡಿಸುವ ಜವಾಬ್ದಾರಿ ಸಂಬಂಧಿಸಿದ ಜಿಲ್ಲಾಧಿಕಾರಿಗಳದ್ದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದರು.

2024–25ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ರೂ.8666.50 ಕೋಟಿ ಹಂಚಿಕೆ ಮಾಡಲಾಗಿದೆ. ಬಾಕಿ ಇರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳು ಬಂದ ಬಳಿಕ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ರೈಲ್ವೇ ಮತ್ತು ವಿಮಾನ ನಿಲ್ದಾಣ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ, ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು. ಕುಡಚಿ–ಬಾಗಲಕೋಟೆ, ತುಮಕೂರು–ದಾವಣಗೆರೆ, ಬೇಲೂರು–ಹಾಸನ, ಶಿವಮೊಗ್ಗ–ರಾಣೆಬೆನ್ನೂರು ಹಾಗೂ ಧಾರವಾಡ–ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಆರಂಭಿಸಿ ಪೂರ್ಣಗೊಳಿಸಲು ಅಗತ್ಯ ಎಲ್ಲಾ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande