
ತುಮಕೂರು, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಆಯೋಜಿಸಿದ್ದ '೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ'ವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.
ಈ ವೇಳೆ 'ಕಲ್ಪಸುಧೆ' ನೆನಪಿನ ಸಂಚಿಕೆಯನ್ನು ಬಿಡುಗಡೆ ಮಾಡಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಕನ್ನಡ ಭಾಷೆ, ಸಂಸ್ಕೃತಿ, ಕರುನಾಡಿನ ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ದಿಕ್ಸೂಚಿ. ಕನ್ನಡನಾಡು, ನುಡಿಯ ಬೆಳವಣಿಗೆ ಕನ್ನಡಿಗರಿಂದಲೇ ಆಗಬೇಕಿದೆ. ಬೇರೊಬ್ಬರಿಂದ ಈ ಕಾರ್ಯ ಆಗುವುದಿಲ್ಲ. ಇದನ್ನು ಕನ್ನಡಿಗರೆಲ್ಲಾ ಅರ್ಥೈಸಿಕೊಂಡು ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಹಾಗೂ ನಾಡಿನ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಕನ್ನಡ ನಾಡು ಸಂಸ್ಕೃತಿಯ ಬೀಡು. ಹಾಗಾಗಿಯೇ ನಮ್ಮ ಕನ್ನಡ ಭಾಷೆ, ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ಇಷ್ಟೊಂದು ಪ್ರಮಾಣದಲ್ಲಿ ಯಾವುದೇ ಭಾಷೆಗೆ ಜ್ಞಾನಪೀಠ ಪ್ರಶಸ್ತಿಗಳು ಸಂದಿರುವ ಉದಾಹರಣೆಗಳಿಲ್ಲ. ಹಾಗೆಯೇ ಯಾವುದೇ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವೂ ಸಿಗುವುದಿಲ್ಲ. ನಮ್ಮ ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿ ಹಾಗೂ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರೆತಿದೆ ಎಂದರೆ ನಮ್ಮ ಭಾಷೆ, ಸಾಹಿತ್ಯ ಎಷ್ಟು ಶ್ರೀಮಂತ ಎಂಬುದನ್ನು ನಾವೆಲ್ಲಾ ಅರಿಯಬೇಕು ಎಂದರು.
೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ತುಮಕೂರಿಗೆ ದಿಕ್ಸೂಚಿಯಾಗಬೇಕು. ಸಮ್ಮೇಳನದಲ್ಲಿ ಕನ್ನಡ ಭಾಷೆ ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa