
ಬೆಂಗಳೂರು, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹೊಸ ವರ್ಷದ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣ ಸಜ್ಜಾಗಿದೆ. 2026ರ ವರ್ಷಾಚರಣೆಗೆ ನಗರದೆಲ್ಲೆಡೆ ಹಬ್ಬದ ವಾತಾವರಣ ಉಂಟಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ಗಳು ಬಣ್ಣ ಬಣ್ಣದ ಲೈಟಿಂಗ್‌ನೊಂದಿಗೆ ಝಗಮಗಿಸುತ್ತಿದ್ದು, ಕೋರಮಂಗಲ ಮತ್ತು ಇಂದಿರಾನಗರವೂ ಸಂಭ್ರಮದ ಕೇಂದ್ರಗಳಾಗಿ ಪರಿಣಮಿಸಿವೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ.
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ನಗರದ ಪ್ರಮುಖ ಸ್ಥಳಗಳಲ್ಲಿ ಮಹಿಳೆಯರ ಭದ್ರತೆ ಸೇರಿದಂತೆ ಸಾರ್ವಜನಿಕ ಸುರಕ್ಷತೆಗೆ ವಿಶೇಷ ಗಮನ ನೀಡಲಾಗಿದೆ. ಐಲ್ಯಾಂಡ್‌ಗಳು, ವಾಚ್ ಟವರ್‌ಗಳು, ಬ್ಯಾರಿಕೇಡ್‌ಗಳು ಹಾಗೂ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಕೇಂದ್ರ ವಿಭಾಗ ಒಂದರಲ್ಲೇ ಸುಮಾರು 6,000ಕ್ಕೂ ಅಧಿಕ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿ 360 ತಾತ್ಕಾಲಿಕ ಕ್ಯಾಮೆರಾಗಳಿಗೆ ಮಾನಿಟರಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಇದೇ ವೇಳೆ ರಸ್ತೆ ಬದಿಯಲ್ಲಿ ಅಳವಡಿಸಿರುವ ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡಿದರೆ, ಟ್ರಾಫಿಕ್ ಜಾಮ್ ಮಾಹಿತಿ, ಹತ್ತಿರದ ಪೊಲೀಸ್ ಠಾಣೆ, ಪೊಲೀಸರ ಲಭ್ಯತೆ, ಅಂಬುಲೆನ್ಸ್ ವಿವರ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸಾರ್ವಜನಿಕರು ಪಡೆಯಬಹುದಾಗಿದೆ.
ಇಂದು ರಾತ್ರಿ 8 ಗಂಟೆಯಿಂದ ನಾಳೆ ಬೆಳಿಗ್ಗೆ 1 ಗಂಟೆಯವರೆಗೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಮ್ಯೂಸಿಯಂ ರಸ್ತೆಗಳಲ್ಲಿ ಪಾದಚಾರಿಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಮ್ಮೆ ನಿರ್ಗಮಿಸಿದ ಬಳಿಕ ಬ್ರಿಗೇಡ್ ರಸ್ತೆಗೆ ಮರುಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಎಂಜಿ ರಸ್ತೆ ಮೆಟ್ರೋ ನಿಲ್ದಾಣ ರಾತ್ರಿ 10 ಗಂಟೆಗೆ ಮುಚ್ಚಲಿದ್ದು, ಸಾರ್ವಜನಿಕರು ಕಬ್ಬನ್ ಪಾರ್ಕ್ ಅಥವಾ ಟ್ರಿನಿಟಿ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಪಾರ್ಕಿಂಗ್ ಸಂಪೂರ್ಣ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಒಟ್ಟಾರೆ ಹೊಸ ವರ್ಷಾಚರಣೆ ಶಾಂತಿಯುತ ಹಾಗೂ ಸುರಕ್ಷಿತವಾಗಿರಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಸಮಗ್ರ ವ್ಯವಸ್ಥೆ ಕಲ್ಪಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa