


ಬಳ್ಳಾರಿ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ದೇವದಾಸಿ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿ ವಿಕಲಚೇತನರ ಶ್ರೇಯೋಭಿವೃದ್ಧಿಗೆ ಪ್ರತಿಯೊಬ್ಬರೂ ನೆರವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ. ಶಾಂತಿ ಅವರು ತಿಳಿಸಿದ್ದಾರೆ.
.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ದೇವದಾಸಿ ಮಹಿಳೆಯರಿಗೆ ಮತ್ತು ವಿಕಲಚೇತನರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಕಾನೂನು ಅರಿವು ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಇಂದಿಗೂ ಚಾಲ್ತಿಯಲ್ಲಿರುವುದು ವಿಷಾದನೀಯ. ನಾವು ಅಭಿವೃದ್ಧಿ ಹೊಂದುತ್ತಿದ್ದೇವೆ. ಆದರೂ ಇಂದು ದೇವದಾಸಿ ಪದ್ಧತಿ ಹಾಗೆಯೇ ಉಳಿದಿದೆ. ದೇವರ ಹೆಸರಿನಲ್ಲಿ ಈ ಪದ್ಧತಿ ನಡೆಯುತ್ತಿರುವುದನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕಿದೆ ಎಂದರು.
2011ರ ಜನಗಣತಿಯ ಪ್ರಕಾರ ದೇಶದಲ್ಲಿ ಶೇ.2.91 ರಷ್ಟು ಹಾಗೂ ರಾಜ್ಯದಲ್ಲಿ ಶೇ.1.8 ರಷ್ಟು ಅಂಗವಿಕಲರಿದ್ದಾರೆ. ವಿಕಲಚೇತನರಿಗೆ ಸರ್ಕಾರದಿಂದ ಹಲವು ಮೂಲಭೂತ ಸೌಲಭ್ಯಗಳಿವೆ. ಉದ್ಯೋಗದಲ್ಲಿ ಶೇ.04 ರಷ್ಟು ಮೀಸಲಾತಿ, ಉಚಿತ ಶಿಕ್ಷಣ, ಸ್ವ-ಉದ್ಯೋಗ ಇನ್ನೂ ಮುಂತಾದ ಸೌಲಭ್ಯಗಳನ್ನು ಪಡೆದು ಸಲಬರಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸಿ, ದೇವದಾಸಿ ಪದ್ಧತಿಯು ಒಂದು ಸಾಮಾಜಿಕ ಅನ್ಯಾಯ. ಈ ಪದ್ಧತಿಯನ್ನು ಕೊನೆಗೊಳಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಸುಂದರ ಜೀವನ ನಡೆಸಬೇಕು. ವಿಕಲಚೇತನರಿಗೆ ಪರಿಸರ ಸ್ನೇಹಿ ನಗರವನ್ನಾಗಿ ಮಾಡುವ ಉದ್ದೇಶ ನಮ್ಮದ್ದಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅವರಿಗಾಗಿ ಉತ್ತಮ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು, ದೇವದಾಸಿ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿ ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು `ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಕಾಯ್ದೆ-2025’ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.
ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆಗೆ 4,000 ಸಾವಿರ ಗುರಿಯನ್ನು ಹೊಂದಿದ್ದು, ಅದರಲ್ಲಿ ಇನ್ನೂ 600 ಕ್ಕಿಂತ ಹೆಚ್ಚು ಮಾಜಿ ದೇವದಾಸಿ ಮಹಿಳೆಯರು ಸಮೀಕ್ಷೆಯಲ್ಲಿ ಭಾಗವಹಿಸಿಲ್ಲ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಮೀಕ್ಷೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಹಾಗೂ ಯೋಜನಾಧಿಕಾರಿ ಸುಧಾ.ಎಂ.ಚಿದ್ರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ, ದೇವದಾಸಿ ಮಹಿಳೆಯರಿಗೆ ಹಾಗೂ ವಿಕಲಚೇತನರಿಗೆ ಸರ್ಕಾರದಿಂದ ಇರುವ ಸೌಲಭ್ಯಗಳು ಮತ್ತು ವಿವಿಧ ಯೋಜನೆಗಳ ಬಗ್ಗೆ ಸಮಗ್ರವಾಗಿ ವಿವರಿಸಿದರು.
ಕಾರ್ಯಾಗಾರದಲ್ಲಿ ಮಾಜಿ ದೇವದಾಸಿ ಮಹಿಳಾ ಫಲಾನುಭಾವಿಗಳಿಗೆ ವಿವಿಧ ಯೋಜನೆಯಡಿ ಚೆಕ್ ಹಾಗೂ ವಿಕಲಚೇತನರಿಗೆ ಹೊಲಿಗೆ ಯಂತ್ರ ಮತ್ತು ಬ್ರೈಲ್ ಕಿಟ್‍ಗಳನ್ನು ವಿತರಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಎಂ., ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತಾ.ಸಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್