ಪಲ್ಸ್ ಪೋಲಿಯೊ : ಶೇ. 100ರಷ್ಟು ಪ್ರಗತಿ ಸಾಧಿಸಿ - ಡಾ. ಸುರೇಶ ಇಟ್ನಾಳ
ಹಾಕುವುದು
ಪಲ್ಸ್ ಪೋಲಿಯೊ : ಶೇ. 100ರಷ್ಟು ಪ್ರಗತಿ ಸಾಧಿಸಿ - ಡಾ. ಸುರೇಶ ಇಟ್ನಾಳ


ಪಲ್ಸ್ ಪೋಲಿಯೊ : ಶೇ. 100ರಷ್ಟು ಪ್ರಗತಿ ಸಾಧಿಸಿ - ಡಾ. ಸುರೇಶ ಇಟ್ನಾಳ


ಕೊಪ್ಪಳ, 08 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಡಿ. 21 ರಿಂದ 24ರ ವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಡಿ. 21 ರಿಮದ 24 ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಇದಕ್ಕಾಗಿ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ಜಿಂಗಲ್ಸ್ ತಯಾರಿಸಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಪೋಲಿಯೊ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿ. 21 ರಿಂದ 24 ರವರೆಗೆ ಅಂಗನವಾಡಿ ಕೇಂದ್ರಗಳನ್ನು ತೆರೆದು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ವ್ಯಾಪ್ತಿಯಲ್ಲಿನ ಮಕ್ಕಳನ್ನು ಕರೆದುಕೊಂಡು ಬಂದು ಅವರಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ಅನಾಥಾಶ್ರಮಗಳಲ್ಲಿ ಹಾಗೂ ಇಟ್ಟಂಗಿ ಭಟ್ಟಿಗಳಲ್ಲಿ ಕೆಲಸ ಮಾಡುವವರ ಎಲ್ಲಾ ಮಕ್ಕಳಿಗೂ ಕೂಡ ಲಸಿಕೆ ಹಾಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಶಿಕ್ಷಣ ಇಲಾಖೆಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುವ ಪೂರ್ವ ದಿನದಂದು ಶಾಲಾ-ಕಾಲೇಜುಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಘೋಷಣೆ ಹಾಕುವುದು ಮತ್ತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಕೈಗೊಳ್ಳಬೇಕು. ಔಷಧಿ ಗುಣಮಟ್ಟ ಕಾಪಾಡುವ ದೃಷ್ಟಿಯಿಂದ ನಿರಂತರ ವಿದ್ಯುತ್ ಸರಬರಾಜು ಮಾಡಲು ಕೆ.ಪಿ.ಟಿ.ಸಿ.ಎಲ್ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರ ಸಭೆ ಹಾಗೂ ನಗರ ಸಭೆಯಲ್ಲಿರುವ ಕಸ ವಿಲೇವಾರಿ ವಾಹನಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕು. ಜಾಗೃತಿ ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನಗಳ ಪೂರೈಕೆ ಮಾಡಬೇಕು. ಎನ್.ಜಿ.ಓ,. ಐ.ಎಮ್.ಎ ಹೀಗೆ ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಹಕಾರ ತೆಗೆದುಕೊಂಡು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 100ಕ್ಕೆ 100ರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 0 ರಿಂದ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1,76,083 ಇದ್ದು, ಮೊದಲ ದಿನ ಭೂತ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಡಿ ನೀಡಿ, ಲಸಿಕೆ ಹಾಕಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 704 ಬೂತ್‌ಗಳು, 1408 ತಂಡಗಳು, 34 ಮೊಬೈಲ್ ತಂಡಗಳು ಹಾಗೂ 17 ಟ್ರಾನ್ಸಿಟ್ ತಂಡಗಳ ಜತೆಗೆ 2816 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಡಬ್ಲ್ಯೂ.ಹೆಚ್.ಓ ಸಲಹೆಗಾರ ಡಾ. ಶ್ರೀಧರ, ಜಿಲ್ಲಾ ಸಂತಾನೊತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಪ್ರಕಾಶ, ಆರೋಗ್ಯ ಇಲಾಖೆಯ ಜಿಲ್ಲಾ ಅನುಷ್ಠಾನ ಅಧಿಕಾರಿ ಡಾ. ಎಂ.ಹೆಚ್ ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಹೆಚ್.ನಂದಕುಮಾರ, ಜಿಲ್ಲಾ ಕ್ಷಯರೋಗ ಮತ್ತು ಕುಷ್ಠರೋಗ ನಿಯಂತ್ರಣಾಧಿಕಾರಿ ಶಶಿಧರ, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಹೆಚ್.ಪ್ರಕಾಶ, ತಜ್ಞ ವೈದ್ಯರಾದ ಈಶ್ವರ ಸವಡಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್ ಸೇರಿದಂತೆ ತಾಲೂಕ ಆರೋಗ್ಯ ಅಧಿಕಾರಿಗಳು, ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande