ಕೊಪ್ಪಳ, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಸಮೀಪದಲ್ಲಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪನಿಯ ಉಕ್ಕು ಕಾರ್ಖಾನೆ ಸ್ಥಾಪನೆಗೆ ಪೂಜೆ ಸಲ್ಲಿಸಿದ ಹಿನ್ನಲೆಯಲ್ಲಿ ಸರ್ವಪಕ್ಷಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ, ಕೈಗಾರಿಕೆ ನಿರ್ಮಾಣವನ್ನು ತಡೆಯಲು ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ನಿಯೋಗದ ಮನವಿಗೆ ಸ್ಪಂದಿಸಿ, ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ, ಬಿಎಸ್‍ಪಿಎಲ್ ಕೈಗಾರಿಕಾ ಸ್ಥಾಪನೆ ಮಾಡದಂತೆ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಸಚಿವ ಶಿವರಾಜ ತಂಗಡಗಿ ಅವರ ಗೃಹ ಕಚೇರಿಯಲ್ಲಿ, ಕೊಪ್ಪಳ ಜಿಲ್ಲೆಯ ಸರ್ವಪಕ್ಷಗಳ ಚುನಾಯಿತ - ಪರಾಭವಗೊಂಡ ಜನಪ್ರತಿನಿಧಿಗಳ, ರಾಜಕೀಯ ಮುಖಂಡರು ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಲಾಯಿತು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಬಿ.ಎಸ್.ಪಿ.ಎಲ್. ಉಕ್ಕು ಕಾರ್ಖಾನೆ ಸ್ಥಾಪನೆಯಿಂದ ಜನರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದರು. ಎಲ್ಲರೂ ಕೂಡಾ ಉಕ್ಕು ಕಾರ್ಖಾನೆ ಸ್ಥಾಪನೆ ಮಾಡದಂತೆ ಸರ್ವಪಕ್ಷಗಳ ನಿಯೋಗದಲ್ಲಿನ ಎಲ್ಲರೂ ಮನವೊಲಿಸುವ ಪ್ರಯತ್ನ ಮಾಡಿದರು. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗೂ ಸರ್ವಪಕ್ಷಗಳ ನಿಯೋಗದಿಂದ ಉಕ್ಕು ಕಾರ್ಖಾನೆ ಸ್ಥಾಪಿಸದಂತೆ ಮನವಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ವಿಧಾನಸಭೆಯ ವಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಾಲಿ ಜನಾರ್ಧನರೆಡ್ಡಿ, ಎಂಎಲ್ಸಿಗಳಾದ ಹೇಮಲತಾ ನಾಯಕ, ಬಸನಗೌಡ ಬಾದರ್ಲಿ, ಶರಣೇಗೌಡ ಪಾಟೀಲ್ ಬಯ್ಯಾಪುರ, ಸಂಸದ ಕೆ.ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಡಾ.ಬಸವರಾಜ ಕ್ಯಾವಟರ್, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಕೆ.ಶರಣಪ್ಪ, ಕರಿಯಣ್ಣ ಸಂಗಟಿ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್