ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಸುಧಾರಣೆ ತರಲು ಉದ್ದೇಶಿಸಲಾಗಿದ್ದು ಅವುಗಳ ವಿವರ ಇಂತಿದೆ..
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ ೫೩ ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.
ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,
ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ.
ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.
ii) ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
iii) ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.
iv) ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
vii) ʻಜ್ಞಾನಸೇತುʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,೦೦೦ ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa