ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿ ಕೆ ಶಿವಕುಮಾರ್ ವಿಧಾನ ಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು.
ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದರು.
ವಿಧಾನ ಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಸಂಚಾರ ದಟ್ಟಣೆ ಉಂಟಾದರೆ ಎಲ್ಲಾ ಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa