ಬಳ್ಳಾರಿ, 10 ಜೂನ್ (ಹಿ.ಸ.) :
ಆ್ಯಂಕರ್ : ಅಗ್ನಿ ಅವಘಡ ತಡೆಗಟ್ಟುವಿಕೆ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಮಂಗಳವಾರ ಅಣಕು ಪ್ರದರ್ಶನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬಿಮ್ಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಜವಾಬ್ದಾರಿಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ಅಣಕು ಪ್ರದರ್ಶನದಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಮನವರಿಕೆ ಮಾಡಲಾಯಿತು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಭಾಗವಹಿಸಿ ಮಾತನಾಡಿ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಬಂದಾಗ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಶುಶ್ರೂಷಕರು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಒಂದೆಡೆ ಸೇರಲು ಧ್ವನಿವರ್ಧಕ ಅಳವಡಿಸಬೇಕು ಎಂದು ಬಿಮ್ಸ್ ಆಡಳಿತಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಬೆಂಕಿ ಆರಿಸುವ ಸಾಧನಗಳನ್ನು (ಫೈರ್ ಎಕ್ಸ್ಟಿಂಗ್ವಿಷರ್ಸ್) ಬಳಸಿ ಬೆಂಕಿ ನಂದಿಸುವ ಕಾರ್ಯದ ಅಣಕು ಪ್ರದರ್ಶಿಸಲಾಯಿತು.
ಬಳಿಕ ಅಗ್ನಿಶಾಮಕ ಅಧಿಕಾರಿಗಳ ತಂಡ ಮತ್ತು ಬಿಮ್ಸ್ ನ ವೈದ್ಯಕೀಯ ಅಧೀಕ್ಷಕರಾದ ಡಾ.ಇಂಧುಮತಿ ಅವರ ನೇತೃತ್ವದಲ್ಲಿ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿಗಳ ತಂಡ ರಚಿಸಿ, ಕುತೂಹಲಕಾರಿಯಾಗಿ ಅಣಕು ಪ್ರದರ್ಶನ ನಡೆಸಲಾಯಿತು.
ಅಣಕು ಪ್ರದರ್ಶನದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಲ್ಲಿ ಬಳಸಬಹುದಾದ ಬೆಂಕಿ ನಂದಿಸುವ ಸಾಧನಗಳು, ಅಗ್ನಿ ಸಂಭವಿಸಿದ ಸ್ಥಳದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸುವುದು, ಪ್ರಥಮ ಚಿಕಿತ್ಸೆ ಹಾಗೂ ಇತರೆ ಕ್ರಮಗಳ ಕುರಿತು ಪರಿಪೂರ್ಣ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತರಾದ ಪರಮೇಶ್ ಸೇರಿದಂತೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಇತರೆ ವೈದ್ಯಾಧಿಕಾರಿಗಳು, ಶುಶ್ರೂಷಕರು, ಸಿಬ್ಬಂದಿ ವರ್ಗದವರು ಹಾಗೂ ಇತರರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್