ಬಳ್ಳಾರಿ, 16 ಜೂನ್ (ಹಿ.ಸ.) :
ಆ್ಯಂಕರ್ : ಸರ್ಕಾರದ ಹಲವು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಅವರು ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಜ್ಯ ಹಣಕಾಸು ಆಯೋಗದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಆಯೋಗದಿಂದ ಶಿಫಾರಸು ಮಾಡಲಾಗುವುದು. ಕಟ್ಟಡ ತೆರಿಗೆ, ವಾಣಿಜ್ಯ ಮಳಿಗೆಗಳ ತೆರಿಗೆ ಬಾಕಿ ವಸೂಲಾತಿಗಳನ್ನು ಕ್ರಮ ವಹಿಸಬೇಕು ಎಂದರು.
ಆಸ್ತಿ ತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್.ಎಸ್.ಪೆÇಂಡೆ, ಆಪ್ತ ಕಾರ್ಯದರ್ಶಿ ಕೆ.ಯಾಲಕ್ಕಿಗೌಡ, ಸಮಾಲೋಚಕರಾದ ಎಂ.ಕೆ ಕೆಂಪೇಗೌಡ, ಸಿ.ಜಿ.ಸುಪ್ರಸನ್ನ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಬಳ್ಳಾರಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ವಿಜಯನಗರ ಜಿಪಂ ಸಿಇಒ ನೊಂಗ್ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್